ಕೂಡಿಗೆ, ಆ. ೨೬: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಕೋರಂ ಕೊರತೆ ಕಾರಣ ಮುಂದೂಡಲಾಯಿತು.
ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಅಧ್ಯಕ್ಷೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೇವಲ ಪಂಚಾಯಿತಿ ಕಟ್ಟಡ ಅಭಿವೃದ್ಧಿಗೆ ಮಾತ್ರ ಒತ್ತು ಕೊಡಲಾಗುತ್ತಿದ್ದು, ಗ್ರಾಮಗಳ ಅಭಿವೃದ್ಧಿ ಕುಂಠಿತ ವಾಗುತ್ತಿದೆ ಎಂದು ಸದಸ್ಯರು ಆರೋಪಿಸಿದರು. ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲಾ ವಿಚಾರಗಳನ್ನು ಗಮನಕ್ಕೆ ತಂದು ಚರ್ಚಿಸಿ ಅನಂತರ ಅನುಷ್ಠಾನಕ್ಕೆ ಮುಂದಾಗಬೇಕಿದೆ ಎಂದು ಆಗ್ರಹಿಸಿದರು. ಇದೇ ರೀತಿ ಮುಂದುವರೆದರೆ ಮುಂಬರುವ ಸಭೆಗಳನ್ನು ಸಹ ಬಹಿಷ್ಕರಿಸಲಾಗುವುದು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಪಂ ಅಧ್ಯಕ್ಷ ಬಿ.ಕೆ.ಚೆಲುವರಾಜು, ಪ್ರಸಕ್ತ ಆಡಳಿತ ಮಂಡಳಿ ಅವಧಿಯಲ್ಲಿ ಗ್ರಾಮ ಸರ್ವಾಂಗೀಣ ಅಭಿವೃದ್ಧಿ ಕಂಡಿದೆ. ವೈಯಕ್ತಿಕ ಕಾರಣಕ್ಕಾಗಿ ಅಪಪ್ರಚಾರ ಮಾಡಲಾಗುತ್ತಿದೆ ಎಂದರು.
ಪ್ರತಿ ಸಭೆಯಲ್ಲಿ ಬಿಲ್ಗಳ ಬಗ್ಗೆ ಸದಸ್ಯರ ಗಮನಕ್ಕೆ ತಂದು ಅನುಮೋದನೆ ಪಡೆದುಕೊಳ್ಳ ಲಾಗುತ್ತಿದೆ. ಕಾನೂನಿನ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಪ್ರತಿ ತಿಂಗಳ ಸಭಾ ನಡಾವಳಿ ಪ್ರಕಾರವೇ ತಾನು ಕಾರ್ಯನಿರ್ವಹಿಸುತ್ತಿದ್ದೇನೆ. ಇರುವಂತಹ ಅನುದಾನವನ್ನು ಸಮಪಾಲು ಪ್ರತಿ ಸದಸ್ಯರಿಗೆ ಒದಗಿಸಲಾಗುತ್ತಿದೆ ಎಂದು ಪಿಡಿಒ ಸುಮೇಶ್ ತಿಳಿಸಿದರು.
೨೩ ಸದಸ್ಯರ ಪೈಕಿ ೧೧ ಮಂದಿ ಸದಸ್ಯರು ಮಾತ್ರ ಪಾಲ್ಗೊಂಡಿದ್ದರು. ಸಭೆಯಲ್ಲಿ ಸದಸ್ಯರುಗಳಾದ ಎಂ.ಎಸ್. ಶಿವಾನಂದ, ಮುರುಳೀಧರ್, ರಮೇಶ್, ಚಿತ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.