ಮಡಿಕೇರಿ, ಆ. ೨೬: ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ತಡೆಗೋಡೆ ಕಾಮಗಾರಿ ಕಳಪೆ ಗುಣಮಟ್ಟದಲ್ಲಿ ಕೂಡಿದ್ದು, ಇದರ ಪರಿಶೀಲನೆ ನಡೆಸಿ ಗುತ್ತಿಗೆದಾರರು ಹಾಗೂ ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಲೋಕೋಪಯೋಗಿ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ರೂ. ೭ ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ತಡೆಗೋಡೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ಉಬ್ಬು ಹಾಗೂ ಬಿರುಕು ಕಾಣಿಸಿಕೊಂಡು ಕುಸಿಯುವ ಹಂತ ತಲುಪಿತ್ತು. ಪರಿಣಾಮ ಮಡಿಕೇರಿ ಹಾಗೂ ಮಂಗಳೂರು ನಡುವಿನ ಹೆದ್ದಾರಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಕಾಮಗಾರಿಗೆ ಮುನ್ನ ದೆಹಲಿಯಿಂದ ಆಗಮಿಸಿದ್ದ ಅಧಿಕಾರಿಗಳಿಗೆ ಇಲ್ಲಿನ ಹವಾಮಾನಕ್ಕೆ ತಕ್ಕಂತೆ ಕಾಮಗಾರಿ ಕೈಗೊಳ್ಳಬೇಕು ಸೇರಿದಂತೆ ಕೆಲವೊಂದು ಸಲಹೆಯನ್ನು ತಾನು ನೀಡಿದ್ದೆ ಅದನ್ನು ಪರಿಗಣಿಸಿಲ್ಲ ಎಂದು ಪತ್ರದಲ್ಲಿ ಶಾಸಕ ರಂಜನ್ ಉಲ್ಲೇಖಿಸಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಕಾಮಗಾರಿ ನಡೆಸಿದ ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸುವುದರ ಜೊತೆಗೆ ಇಂಜಿನಿಯರ್ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.