ಮಡಿಕೇರಿ, ಆ. ೨೯: ಕೊಡಗು ಜಿಲ್ಲಾ ಕಾಂಗ್ರೆಸ್ನ ಮಾಜಿ ಅಧ್ಯಕ್ಷ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಿವು ಮಾದಪ್ಪ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.
ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾನು ಪಕ್ಷದ ಜಿಲ್ಲಾಧ್ಯಕ್ಷನಾಗುವ ಮೊದಲು ಹಾಗೂ ಜಿಲ್ಲಾಧ್ಯಕ್ಷ ಆದ ನಂತರವೂ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಶ್ರಮಿಸಿದ್ದೇನೆ. ಚುನಾವಣೆ ಸಂದರ್ಭದಲ್ಲಿ ಕೂಡ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ.
ಹೀಗಿದ್ದರೂ ಕೂಡ ತನ್ನನ್ನು ಜಿಲ್ಲಾಧ್ಯಕ್ಷ ಸ್ಥಾನದಿಂದ ಯಾವುದೇ ಕಾರಣ ನೀಡದೆ ಬದಲಾವಣೆ ಮಾಡಲಾಯಿತು. ಈ ಬಗ್ಗೆ ಇದುವರೆಗೆ ತನಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಇದುವರೆಗೂ ರಾಜಕೀಯದಲ್ಲಿ ತಟ್ಟಸ್ಥನಾಗಿದ್ದ ತಾನು ಇದೀಗ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಈ ಸಂಬAಧ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಅವರಿಗೆ ಸಂದೇಶ ರವಾನಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷರಿಗೂ ರಾಜೀನಾಮೆ ಪತ್ರ ಕಳುಹಿಸುವುದಾಗಿ ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ಚೊಟ್ಟೆಯಂಡಮಾಡ ಮಂಜು ಉಪಸ್ಥಿತರಿದ್ದರು.