ಗೋಣಿಕೊಪ್ಪಲು, ಸೆ. ೭: ಕಾಂಗ್ರೆಸ್ ಪಕ್ಷಕ್ಕೆ ತನ್ನದೆ ಆದ ಮತದಾರರ ಬೆಂಬಲವಿದ್ದು ಕಳೆದ ಬಾರಿ ಚುನಾವಣೆಯಲ್ಲಿ ಶೇ.೩೭ರಷ್ಟು ಮತಗಳು ಕಾಂಗ್ರೆಸ್ ಪರವಾಗಿ ಬಂದಿವೆ. ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಬೆಂಬಲ ದೊರೆಯುತ್ತಿದ್ದು ಕೊಡಗಿನಲ್ಲಿಯೂ ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಪಕ್ಷದ ಗತ ವೈಭವ ಮತ್ತೆ ಮರುಕಳಿಸಲಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಎ.ಎಸ್. ಪೊನ್ನಣ್ಣ ಅಭಿಪ್ರಾಯಪಟ್ಟರು.
ಹುದಿಕೇರಿ ಹೋಬಳಿಯಲ್ಲಿ ಆಯೋಜನೆಗೊಂಡಿದ್ದ ಕಾಂಗ್ರೆಸ್ ಹಿರಿಯ ಮುಖಂಡರ ಸಭೆಯಲ್ಲಿ ಮಾತನಾಡಿದ ಎ.ಎಸ್. ಪೊನ್ನಣ್ಣ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ಈಗಾಗಲೇ ಹಲವು ಸುತ್ತಿನ ಕಾರ್ಯಕರ್ತರ ಭೇಟಿ ಸಂದರ್ಭ ಉತ್ತಮ ವಾತಾವರಣ ಕಂಡು ಬಂದಿದೆ. ಮತದಾರರು ಬದಲಾವಣೆ ಬಯಸಿದ್ದಾರೆ. ಮಡಿಕೇರಿ ವಿಧಾನ ಸಭಾ ಕ್ಷೇತ್ರದಲ್ಲೂ ಉತ್ತಮ ಬೆಂಬಲ ದೊರೆತ್ತಿದ್ದು ಜಿಲ್ಲೆಯ ಎರಡು ಕ್ಷೇತ್ರಗಳು ಮುಂದಿನ ಚುನಾವಣೆ ಯಲ್ಲಿ ಕೈವಶ ವಾಗುವುದರಲ್ಲಿ ಸಂಶಯವಿಲ್ಲ ಎಂದು ಆಶಾಭಾವನೆ ವ್ಯಕ್ತಪಡಿಸಿದರು.
ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ನ ಹಿರಿಯ ಮುಖಂಡರಾದ ಚೆಕ್ಕೇರ ವಾಸು ಕುಟ್ಟಪ್ಪ ಮಾತನಾಡಿ ಕಾಂಗ್ರೆಸ್ ಪಕ್ಷ ಹಲವು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನರ ಕಷ್ಟಕ್ಕೆ ಸ್ಪಂದನ ನೀಡಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ ಮಾತನಾಡಿ ಪಕ್ಷ ಸಂಘಟನೆಗೆ ಚುರುಕು ನೀಡಲಾಗಿದೆ. ಎಲ್ಲಾ ಘಟಕಗಳು ಸಕ್ರಿಯಗೊಂಡಿವೆ. ಕೆಲವು ಘಟಕಗಳಲ್ಲಿ ಇರುವ ಕಾರ್ಯಕರ್ತರನ್ನು ಇನ್ನಷ್ಟು ಸಕ್ರಿಯಗೊಳಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಹುದಿಕೇರಿ ವಲಯ ಕಾಂಗ್ರೆಸ್ಗೆ ನೂತನ ಅಧ್ಯಕ್ಷರಾಗಿ ಹುದಿಕೇರಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಚಂಗುಲAಡ ಸೂರಜ್, ಅಜ್ಜಿಕುಟ್ಟೀರ ನರೇನ್ ಕಾರ್ಯಪ್ಪ ಸೇರಿದಂತೆ ಇನ್ನಿತರ ಪ್ರಮುಖರು ಹಾಜರಿದ್ದರು.