ಸೋಮವಾರಪೇಟೆ: ಎಲ್ಲಾ ಶಾಲೆಗಳ ಶಿಕ್ಷಕರು ಗುಣಮಟ್ಟದ ಶಿಕ್ಷಣದ ಕಡೆಗೆ ಹೆಚ್ಚಿನ ಒತ್ತು ನೀಡಬೇಕು. ಹಾಗಾದಾಗ ಮಾತ್ರ ಪ್ರತಿಯೊಬ್ಬ ವಿದ್ಯಾರ್ಥಿಯು ಉತ್ತಮ ಶಿಕ್ಷಣ ಪಡೆದು ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯಿಸಿದರು.
ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸರಕಾರಿ ಶಾಲೆಗಳ ಗುಣಮಟ್ಟ ಇನ್ನೂ ಹೆಚ್ಚಾಗಬೇಕಿದೆ. ರಾಷ್ಟಿçÃಯ ಶಿಕ್ಷಣ ನೀತಿ ಜಾರಿಗೆ ಬಂದ ಮೇಲೆ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಯಾಗುವತ್ತ ಹೆಜ್ಜೆ ಇರಿಸಿದೆ. ಸರ್ಕಾರದಿಂದ ಸುಮಾರು ೨೦ ಕೋಟಿ ರೂ. ಬಿಡುಗಡೆಯಾಗಿದ್ದು ಎಲ್ಲಾ ಶಾಲೆಗಳ ದುರಸ್ತಿಗೆ ಕ್ರಮ ಕೈಗೊಂಡಿದೆ. ರಾಜ್ಯ ಸರಕಾರವು ಕೂಡ ಹೊಸ ಶಾಲಾ ಕೊಠಡಿ ನಿರ್ಮಾಣಕ್ಕೆ ತೀರ್ಮಾನಿಸಿದ್ದು ೮೧೦೦ ಕೊಠಡಿ ನಿರ್ಮಾಣಕ್ಕೆ ಮುಂದಾಗಿದೆ ಎಂದರು.
ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಗುಂಡ್ಲುಪೇಟೆ ತಾಲೂಕು ಕಬ್ಬಳ್ಳಿ ಸರಕಾರಿ ಬಾಲಕಿಯರ ಪ್ರೌಢಶಾಲೆ ಮುಖ್ಯ ಶಿಕ್ಷಕ ಎಸ್.ಎಂ. ಸಿದ್ದರಾಜಪ್ಪ ಮಾತನಾಡಿ, ಭಾರತೀಯ ಗುರು ಪರಂಪರೆ ಶ್ರೇಷ್ಠವಾದುದು. ಅಜ್ಞಾನ ಮತ್ತು ಅಂಧಕಾರವನ್ನು ಹೋಗಲಾಡಿಸಿ ಸುಜ್ಞಾನವನ್ನು ನೀಡುವ ಶಿಕ್ಷಕ ವೃತ್ತಿ ಶ್ರೇಷ್ಠವಾದ ಕಾಯಕ ಎಂದರು.
ಇಚ್ಛಾಶಕ್ತಿ, ಜ್ಞಾನಶಕ್ತಿ, ಕ್ರಿಯಾಶಕ್ತಿಯ ಮೂಲಕ ಶ್ರೇಷ್ಠತೆಯನ್ನು ಪಡೆದುಕೊಂಡ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಮೇರು ವ್ಯಕ್ತಿತ್ವವನ್ನು ಇಂದಿನ ಶಿಕ್ಷಕರು ತಮ್ಮ ಜೀವನದಲ್ಲಿಯೂ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು ಕಾರ್ಯಕ್ರ‍್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ತಹಶೀಲ್ದಾರ್ ಎಸ್.ಎನ್. ನರಗುಂದ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ಕನ್ನಡ ಜಾಗೃತಿ ಸಮಿತಿ ಸದಸ್ಯ ಎಸ್.ಮಹೇಶ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪ್ರದೀಪ್, ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಮಾಜಿ ಅಧ್ಯಕ್ಷ ಹಾಲೇಬೇಲೂರು ನಿರ್ವಾಣಿ ಶೆಟ್ಟಿ, ಶಿಕ್ಷಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭ ನಿವೃತ್ತ ಶಿಕ್ಷಕರು, ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ತಾಲೂಕಿನ ಶಿಕ್ಷಕರ ಮಕ್ಕಳು, ಅತೀ ಹೆಚ್ಚು ಅಂಕಪಡೆದ ವಿಶೇಷಚೇತನ ಮಕ್ಕಳು, ಶೇ. ೧೦೦ ಫಲಿತಾಂಶ ಪಡೆದ ಶಾಲಾ ಮುಖ್ಯ ಶಿಕ್ಷಕರುಗಳನ್ನು ಶಾಸಕ ಅಪ್ಪಚ್ಚು ರಂಜನ್ ಸೇರಿದಂತೆ ಇತರ ಗಣ್ಯರು ಸನ್ಮಾನಿಸಿದರು.ಗೋಣಿಕೊಪ್ಪಲು: ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಬಹುದೊಡ್ಡ ಜವಾಬ್ದಾರಿಯನ್ನು ಶಿಕ್ಷಕರು ಮಾಡುತ್ತಿದ್ದಾರೆ, ಇದರಿಂದಾಗಿ ಶಿಕ್ಷಕರ ಹುದ್ದೆಗೆ ಸಮಾಜದಲ್ಲಿ ಗೌರವದ ಸ್ಥಾನವಿದೆ ಎಂದು ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.
ಕೊಡಗು ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವೀರಾಜಪೇಟೆ ತಾಲೂಕು ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರ ಸಂಘ, ಶಿಕ್ಷಕರ ಕಲ್ಯಾಣ ನಿಧಿ, ತಾಲೂಕು ಶಿಕ್ಷಕರ ಕಲ್ಯಾಣ ಸಮಿತಿ ಹಾಗೂ ಕಾಲ್ಸ್ ವಿದ್ಯಾಸಂಸ್ಥೆ ಗೋಣಿಕೊಪ್ಪ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಗೌರವ ನೀಡಿ ಮಾತನಾಡಿದ ಇವರು, ಗುರುವಿನ ಸ್ಥಾನ ತುಂಬುವುದು ಸಾಮಾನ್ಯ ವಿಚಾರವಲ್ಲ, ಕಾಲ ಬದಲಾಗುತ್ತಿದ್ದಂತೆಯೇ ಶಿಕ್ಷಣ ವ್ಯವಸ್ಥೆ ಬದಲಾಗುತ್ತಿದೆ, ಮುಂದೆ ದೇಶದಲ್ಲಿ ಏಕ ಶಿಕ್ಷಣ ನೀತಿ ಜಾರಿ ಆಗಲಿದೆ. ಅದರಿಂದ ಪ್ರತಿ ಮಗುವಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಉದ್ದೇಶವಾಗಿದೆ ಎಂದರು.
ಪೊನ್ನAಪೇಟೆ ಹಾಗೂ ವೀರಾಜಪೇಟೆ ತಾಲೂಕಿನ ಸಾವಿರಾರು ಶಿಕ್ಷಕ, ಶಿಕ್ಷಕಿಯರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಹಾತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗುಮ್ಮಟೀರ ದರ್ಶನ್ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಕಳೆದೆರಡು ವರ್ಷಗಳಿಂದ ಕೊರೊನಾ ಕಾರಣದಿಂದ ಕಾರ್ಯಕ್ರಮ ನಡೆಸಲು ಸಾಧ್ಯವಾಗಲಿಲ್ಲ. ಇದೀಗ ಉತ್ತಮ ವೇದಿಕೆಯಲ್ಲಿ ಗಣನೀಯ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರಿಗೆ ಗೌರವ ನೀಡಲಾಗುತ್ತಿದೆ, ದೊಡ್ಡ ಪ್ರಮಾಣದಲ್ಲಿ ಶಿಕ್ಷಕರು ಭಾಗವಹಿಸಿರುವುದು ಉತ್ತಮ ಬೆಳವಣಿಗೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬಿಳಗಿ ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಹೇಳಿದರು.
ಕಾಲ್ಸ್ ವಿದ್ಯಾಸಂಸ್ಥೆಯ ಪ್ರಮುಖರಾದ ಅಂರ‍್ರಾಷ್ಟಿçÃಯ ಅಥ್ಲೆಟ್ ಪಟು ಅಶ್ವಿನಿ ನಾಚಪ್ಪ ಕಾರ್ಯಕ್ರಮದ ಬಗ್ಗೆ ಮಾತನಾಡಿ ತಾಲೂಕಿನ ಶಿಕ್ಷಕರು ತಮ್ಮ ಸಂಸ್ಥೆಗೆ ಆಗಮಿಸಿರುವುದನ್ನು ಮನಗಂಡು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಸ್ಥೆಯ ಅಧ್ಯಕ್ಷ ದತ್ತ ಕರುಂಬಯ್ಯ ಹಾಗೂ ಅಶ್ವಿನಿ ನಾಚಪ್ಪ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಡಾ. ಜೆ. ಸೋಮಣ್ಣ ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಪಾತ್ರದ ಬಗ್ಗೆ ವಿವರ ನೀಡಿದರು.
ತಾಲೂಕು ಪಂಚಾಯಿತಿ ಇಒ ಕೆ.ಸಿ. ಅಪ್ಪಣ್ಣ, ಪೊನ್ನಂಪೇಟೆ ತಹಶೀಲ್ದಾರ್ ಪ್ರಶಾಂತ್ ಎಸ್.ಎನ್., ಗೋಣಿಕೊಪ್ಪಲು ವೃತ್ತನಿರೀಕ್ಷಕ ಗೋವಿಂದರಾಜು, ಇಲಾಖೆಯ ಪ್ರಮುಖರಾದ ವನಜಾಕ್ಷಿ, ಕೆ. ಆರ್. ರಾಜೇಶ್, ಕುಂಬೇರ ಎ. ಮನುಕುಮಾರ್, ವೀರಾಜಪೇಟೆ ತಹಶೀಲ್ದಾರ್ ಡಿ. ಅರ್ಚನ ಭಟ್ ಸೇರಿದಂತೆ ಇನ್ನಿತರರು ಇದ್ದರು.
ಕಾರ್ಯಕ್ರಮ ಅಂಗವಾಗಿ ಶಿಕ್ಷಕರ ತಂಡ ರೈತ ಗೀತೆ, ನಾಡಗೀತೆ ಹಾಡಿದರು. ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ ಸ್ವಾಗತಿಸಿದರು. ಶಿಕ್ಷಕಿ ಚಂದನ ಕಾರ್ಯಕ್ರಮ ನಿರೂಪಣೆ ಮಾಡಿದರು.
ವಿವಿಧ ಕ್ರೀಡೆಯಲ್ಲಿ ಪಾಲ್ಗೊಂಡು ಜಯಶೀಲರಾದ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ ನೀಡಲಾಯಿತು.