ಸಿದ್ದಾಪುರ, ಸೆ. ೧೨: ತೋಟದ ಲೈನ್‌ಮನೆಗಳಲ್ಲಿ ವಾಸಿಸುವ ನಿವೇಶನ ರಹಿತರಿಗೆ ಸೂರು ಕಲ್ಪಿಸುವಂತೆ ಒತ್ತಾಯಿಸಿ ಸಿಐಟಿಯು ವತಿಯಿಂದ ಮಾಲ್ದಾರೆ ಗ್ರಾಮ ಪಂಚಾಯಿತಿಯ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಸರ್ಕಾರಿ ಪ್ರಾಥಮಿಕ ಶಾಲೆಯ ಮುಂಭಾಗದಿAದ ಮೆರವಣಿಗೆ ಹೊರಟ ನಿವೇಶನ ರಹಿತರು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಮಹದೇವ್, ಖಾಸಗಿ ಕಾಫಿ ತೋಟಗಳಲ್ಲಿ ನೂರಾರು ಕುಟುಂಬಗಳು ಲೈನ್‌ಮನೆಗಳಲ್ಲಿ ವಾಸ ಮಾಡಿಕೊಂಡು ಜೀವನ ನಡೆಸುತ್ತಿವೆ. ಬದುಕಿನ ಸಂದ್ಯಾ ಕಾಲದಲ್ಲಿ ಅವರಿಗೆ ವಾಸಿಸಲು ಸೂರು ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದ್ದು ಇವುಗಳನ್ನು ಬಿಡಿಸಿ ತೋಟದ ಲೈನ್ ಮನೆಗಳಲ್ಲಿ ಹಾಗೂ ಬಾಡಿಗೆ ಮನೆಗಳಲ್ಲಿ ವಾಸ ಮಾಡುತ್ತಿರುವ ಬಡ ಕುಟುಂಬಗಳಿಗೆ ನಿವೇಶನ ಒದಗಿಸಿ ಕೊಡಬೇಕೆಂದು ಒತ್ತಾಯಿಸಿದರು.

ಕೊಡಗು ಕಾರ್ಮಿಕ ಸಂಘದ ಮುಖಂಡ ಹೆಚ್.ಬಿ.ರಮೇಶ್ ಮಾತನಾಡಿ ಈಗಾಗಲೇ ಅಮೃತ ಸ್ವಾತಂತ್ರ‍್ಯ ಮಹೋತ್ಸವವನ್ನು ಆಚರಿಸಿದ ನಮಗೆ ೭೫ ವರ್ಷ ಸಂದರು ಬಡ ಕುಟುಂಬಗಳಿಗೆ ವಾಸಿಸಲು ಸ್ವಂತ ಸೂರಿಲ್ಲದ ಸ್ಥಿತಿ ನಿರ್ಮಾಣವಾಗಿರುವುದು ವಿಪರ್ಯಾಸ ಎಂದರು.

ಈಗಾಗಲೇ ಕೊಡಗು ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸಂಘಟನೆಯ ನೇತೃತ್ವದಲ್ಲಿ ನಿವೇಶನ ರಹಿತರ ಹೋರಾಟವನ್ನು ಹಮ್ಮಿಕೊಂಡು ಬರುತ್ತಿದ್ದರು ಕೂಡ ಜಿಲ್ಲಾಡಳಿತ ಹಾಗೂ ಗ್ರಾಮ ಪಂಚಾಯಿತಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದು ಖಂಡನೀಯ. ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಿದಲ್ಲಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಅಹೋರಾತ್ರಿ ಧರಣಿಯನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು

ಪ್ರತಿಭಟನೆಯಲ್ಲಿ ಸಿಐಟಿಯು ಸಂಘಟನೆಯ ಪದಾಧಿಕಾರಿ ರಾಜಪ್ಪಾಜಿ, ನಿವೇಶನ ರಹಿತರು ಪಾಲ್ಗೊಂಡಿದ್ದರು.