ಕುಶಾಲನಗರ, ಸೆ. ೧೬: ಯುವ ಬ್ರಿಗೇಡ್ ವತಿಯಿಂದ ರಾಜ್ಯದಾದ್ಯಂತ ಸಂಚರಿಸುತ್ತಿರುವ ‘ಕನ್ನಡರಥ’ ಬುಧವಾರ ಕೊಡಗು ಜಿಲ್ಲೆಗೆ ಆಗಮಿಸಿದೆ. ಸ್ವಾತಂತ್ರö್ಯ ಯೋಧರ ಮಾಹಿತಿಯನ್ನು ಒಳಗೊಂಡ ಸಮಗ್ರ ಚಿತ್ರಣವನ್ನು ನಾಡಿನ ಜನತೆಗೆ ಪ್ರಚುರಪಡಿಸುವ ಹಿನ್ನೆಲೆ ರಾಜ್ಯದ ೨೨ ಜಿಲ್ಲೆಗಳಲ್ಲಿ ಸಾಗಿದ ರಥ ಕುಶಾಲನಗರಕ್ಕೆ ಆಗಮಿಸಿದ ಸಂದರ್ಭ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್ ಅವರು ಕನ್ನಡ ಮಾತೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸ್ವಾಗತಿಸಿದರು.
ಯುವ ಬ್ರಿಗೇಡ್ ಮೂಲಕ ನಾಡಿನ ಜನತೆ ಯುವಪೀಳಿಗೆಗೆ ಅಮೂಲ್ಯ ಮಾಹಿತಿ ಒದಗಿಸುವ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಜಯವರ್ಧನ್ ಶುಭ ಕೋರಿದರು. ಯುವ ಬ್ರಿಗೇಡ್ ವಿಭಾಗೀಯ ಸಂಚಾಲಕ ಚಂದ್ರಶೇಖರ್ ಅವರು, ಕನ್ನಡ ರಥಯಾತ್ರೆ ಕಳೆದ ೩ ತಿಂಗಳಿನಿAದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ ನಾಡಿನ ಯೋಧರ ಬಗ್ಗೆ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆ ಮೂಲಕ ಅರಿವು ಮಾಹಿತಿ ನೀಡಲಾಗುತ್ತಿದೆ. ಇದರೊಂದಿಗೆ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮ ಮತ್ತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಕುಶಾಲನಗರದ ಕಾರು ನಿಲ್ದಾಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆ.ಎಸ್. ಮೂರ್ತಿ, ಕಾವೇರಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ.ಎನ್. ಚಂದ್ರಮೋಹನ್, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಬಿ.ಜೆ. ಅಣ್ಣಯ್ಯ, ಪ್ರಮುಖರಾದ ಡಿ.ಆರ್. ಸೋಮಶೇಖರ್, ನವನೀತ್ ಪೊನ್ನೆಟಿ ಮತ್ತಿತರರು ಇದ್ದರು. ಕುಶಾಲನಗರ ಕನ್ನಡ ಭಾರತಿ ಪದವಿ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಪಾಲ್ಗೊಂಡಿದ್ದರು. ಕನ್ನಡ ರಥ ಕೂಡ್ಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ, ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ತೆರಳಿ ಸ್ವಾತಂತ್ರö್ಯ ಯೋಧರ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಸಿಕೊಟ್ಟರು.