ಮಡಿಕೇರಿ, ಸೆ. ೧೫: ಯಾವುದೇ ವಿಷಯದಲ್ಲಿ ಸಾಧನೆ ಮಾಡಬೇಕಾದರೆ ನಾವು ವಿದ್ಯಾವಂತರಾಗಿರಬೇಕು. ಇದನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದ ಸರ್ ಎಂ. ವಿಶ್ವೇಶ್ವರಯ್ಯ ಅವರು ತಮ್ಮ ಜೀವನವನ್ನೇ ಸಮಾಜಕ್ಕೆ ಮುಡಿಪಾಗಿಟ್ಟವರು. ಕರ್ನಾಟಕದಲ್ಲಿ ಹುಟ್ಟಿ ಭಾರತದ ಭಾಗ್ಯೋದಯವಾದವರು ಎಂದು ನಿವೃತ್ತ ಪ್ರಾಂಶುಪಾಲ ಡಾ. ಜೆ. ಸೋಮಣ್ಣ ನುಡಿದರು.

ಅವರು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಸರ್ ಮೋಕ್ಷಗುಂಡA ವಿಶ್ವೇಶ್ವರಯ್ಯ ಅವರ ಜನ್ಮ ದಿನದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ವಿಶ್ವೇಶ್ವರಯ್ಯ ಅವರು ಮೈಸೂರು ಸಂಸ್ಥಾನದ ದಿವಾನರಾಗಿದ್ದು ಜನ ಜೀವನದ ಭಾಗವಾಗಿದ್ದರು. ಕನ್ನಂಬಾಡಿ ಕಟ್ಟೆ ಕಟ್ಟುವ ಮೂಲಕ ಲಕ್ಷಾಂತರ ಜನರ ಬದುಕಿಗೆ ಬಲ ನೀಡಿದವರು. ಅಂದಿನ ಕಾಲದಲ್ಲೇ ಕೈಗಾರಿಕಾ ಕ್ರಾಂತಿ ಮಾಡಿ ಹಲವಾರು ಕೈಗಾರಿಕೆಗಳನ್ನು ಸ್ಥಾಪಿಸಿದವರು ಎಂದು ಹೇಳಿದರು.

ಮಡಿಕೇರಿ ನಗರ ಸಭಾ ಆಯುಕ್ತ ವಿಜಯ್ ಮಾತನಾಡುತ್ತಾ ವಿದ್ಯಾರ್ಥಿಗಳು ಸರ್ ಎಂ. ವಿಶ್ವೇಶ್ವರಯ್ಯ ಅವರ ಆದರ್ಶ ತ್ಯಾಗ, ಶಿಸ್ತುಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ನಾವು ಇಂದು ಕರ್ನಾಟಕದಲ್ಲಿ ನೂರು ವರ್ಷಗಳ ಆಚರಣೆ ಮಾಡುತ್ತಿರುವ ಸಂಸ್ಥೆಗಳೆಲ್ಲವನ್ನೂ ಸರ್ ಎಂ. ವಿಶ್ವೇಶ್ವರಯ್ಯ ಮತ್ತು ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಸಂಸ್ಥೆಗಳಾಗಿವೆ.

ಕನ್ನಡ ಸಾಹಿತ್ಯ ಪರಿಷತ್, ಕೃಷ್ಣರಾಜಸಾಗರ, ಮೈಸೂರು ಸಾಬೂನು ಕಾರ್ಖಾನೆ, ಮೈಸೂರು ವಿಶ್ವವಿದ್ಯಾಲಯ, ಮೈಸೂರು ಬ್ಯಾಂಕ್, ಮೈಸೂರು ಮತ್ತು ಬೆಂಗಳೂರಿನಲ್ಲಿ ಸಾರ್ವಜನಿಕ ಗ್ರಂಥಾಲಯಗಳ ಸ್ಥಾಪನೆ. ಮೈಸೂರು ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ, ಶ್ರೀ ಜಯಚಾಮರಾಜೇಂದ್ರ ವೃತ್ತಿಶಿಕ್ಷಣ ತರಬೇತಿ ಸಂಸ್ಥೆಯ ಸ್ಥಾಪನೆ ಹೀಗೆ ಹತ್ತು ಹಲವು ಸಂಸ್ಥೆಗಳನ್ನು ಸ್ಥಾಪಿಸಿ ಜನಮನ್ನಣೆ ಗಳಿಸಿದವರು ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಐಟಿಐ ಕಾಲೇಜಿನ ಪ್ರಾಂಶುಪಾಲ ಕೆ.ಹೆಚ್. ಪಂಡಿತಾರಾದ್ಯ ವಿದ್ಯಾರ್ಥಿಗಳು ಶಿಸ್ತು, ಪ್ರಾಮಾಣಿಕತೆ ಬೆಳೆಸಿಕೊಳ್ಳಬೇಕು. ಮಾಡುವ ಕೆಲಸದಲ್ಲಿ ಶಿಸ್ತು ಪ್ರಾಮಾಣಿಕತೆ ಇದ್ದರೆ ನೀವು ಕೂಡ ವಿಶ್ವೇಶ್ವರಯ್ಯ ಆಗಬಹುದು. ನಿಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ ನೀವೂ ಕೂಡ ಬೆಳೆಯಲು ಸಾಧ್ಯವಿದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕ ಚಿನ್ನಸ್ವಾಮಿ, ಮಡಿಕೇರಿ ನಗರಸಭಾ ಉಪಾಧ್ಯಕ್ಷೆ ಸವಿತಾ ರಾಕೇಶ್ ಉಪಸ್ಥಿತರಿದ್ದರು.

ಕಸಾಪದ ಜಿಲ್ಲಾ ಗೌರವ ಕಾರ್ಯದರ್ಶಿ ಮುನೀರ್ ಅಹಮದ್ ನಿರೂಪಿಸಿದರು, ಗೌರವ ಕೋಶಾಧಿಕಾರಿ ಎಂ.ಬಿ. ಜೋಯಪ್ಪ ಸ್ವಾಗತಿಸಿದರು. ಚೊಕ್ಕಾಡಿ ಪ್ರೇಮಾ ರಾಘವಯ್ಯ ಮತ್ತು ಸುಶೀಲ ನಾಡಗೀತೆ ಹಾಡಿದರು. ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ಅಂಬೆಕಲ್ ನವೀನ್ ವಂದಿಸಿದರು.