ಮಡಿಕೇರಿ, ಸೆ. ೨೨: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ ಅವರು ಕುಟ್ಟ ಮತ್ತು ಕಾನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಪ್ರಥಮ ಬಾರಿಗೆ ಮಂಗಳ ವಾರ ಭೇಟಿ ನೀಡಿ ವೀಕ್ಷಿಸಿದರು.

ಕುಟ್ಟ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದ ಅಧ್ಯಕ್ಷರು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.

ಪ್ರತಿಯೊಬ್ಬರೂ ಚೆನ್ನಾಗಿ ಓದಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆದು ಚೆನ್ನಾಗಿ ಅಧ್ಯಯನ ಮಾಡಬೇಕು. ವಿದ್ಯಾರ್ಥಿಗಳಲ್ಲಿ ಸಮಯಪಾಲನೆ ಅತೀ ಅವಶ್ಯಕ ಎಂದು ಸಲಹೆ ಮಾಡಿದರು.

ವಿದ್ಯಾರ್ಥಿಗಳು ಭವಿಷ್ಯದಲ್ಲಿ ಯಾವ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು ಎಂದು ಬಯಸಿದ್ದೀರಾ ಎಂಬ ಪ್ರಶ್ನೆಗೆ ವಿದ್ಯಾರ್ಥಿಗಳು ಶಿಕ್ಷಕರು, ವೈದ್ಯರು, ಗಗನಸಖಿ, ಪಶುವೈದ್ಯ, ಇಂಜಿನಿಯರ್, ಸೇರಿದಂತೆ ವಿವಿಧ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಲವಲವಿಕೆ ಯಿಂದ ಉತ್ತರಿಸಿದರು. ಶಾಲೆಯಲ್ಲಿ ಪರಿಸರ, ಪ್ರಯೋಗಾಲಯ, ಕ್ರೀಡಾ ಕೊಠಡಿ ವೀಕ್ಷಿಸಿ ಅಧ್ಯಕ್ಷರು ಮೆಚ್ಚುಗೆ ವ್ಯಕ್ತಪಡಿಸಿದರು. ಗಡಿಭಾಗದ ಕುಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉತ್ತಮವಾಗಿದ್ದು, ಮತ್ತಷ್ಟು ಸಂಪನ್ಮೂಲ ಒದಗಿಸಲು ಅಗತ್ಯ ನೆರವು ನೀಡಲಾಗುವುದು ಎಂದು ಡಾ. ಸಿ. ಸೋಮಶೇಖರ ತಿಳಿಸಿದರು.

ಕಾನೂರು ಮತ್ತು ಕುಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ತರಗತಿಗೆ ಅಗತ್ಯವಿರುವ ಅನುದಾನ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಗಡಿ ಪ್ರದೇಶದ ಶಾಲೆ ಅಭಿವೃದ್ಧಿಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಎಲ್ಲಾ ರೀತಿಯ ಆರ್ಥಿಕ ನೆರವು ನೀಡಲಾಗುವುದು ಎಂದರು.

ಹಾಗೆಯೇ ಕುಟ್ಟ ಸರ್ಕಾರಿ ಪ್ರೌಢ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಮನವಿಯಂತೆ ಅಗತ್ಯ ನೆರವು ನೀಡಲಾಗುವುದು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹೇಳಿದರು. ಗಡಿ ಪ್ರದೇಶದಲ್ಲಿ ಕನ್ನಡ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಎಲ್ಲರೂ ಕೈಜೋಡಿಸು ವಂತೆ ಅಧ್ಯಕ್ಷರು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಅವರು ಕುಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸರ್ಕಾರಿ ಪೌಢ ಶಾಲೆ ಸ್ಥಿತಿಗತಿ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.

ಈಗಾಗಲೇ ಆಗಿರುವ ಕೆಲಸಗಳು, ಇನ್ನಷ್ಟು ಶಾಲೆ ಅಭಿವೃದ್ಧಿ ಕಾರ್ಯಗಳಿಗೆ ಸಂಬAಧಿಸಿದAತೆ ಅಧ್ಯಕ್ಷರ ಗಮನಕ್ಕೆ ತಂದರು.

ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿಭಾಗದ ತೋಳ್ಪಟ್ಟಿ ಗಡಿ ಪ್ರದೇಶಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ ಅವರು ಭೇಟಿ ನೀಡಿ ವೀಕ್ಷಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ವೇದಮೂರ್ತಿ, ಕುಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಶಶಿಧರ, ಎಸ್‌ಡಿಎಂಸಿ ಅಧ್ಯಕ್ಷ ಸುಬ್ರಮಣಿ, ಕನ್ನಡ ಸಾಹಿತ್ಯ ಪರಿಷತ್ತು ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಕೆ.ಎಸ್. ಮೂರ್ತಿ, ನಿವೃತ್ತ ಪ್ರಾಂಶುಪಾಲ ಜೆ. ಸೋಮಣ್ಣ, ಉಪತಹಶೀಲ್ದಾರ್ ಜನಾರ್ಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಮಣಜೂರು ಮಂಜುನಾಥ್, ಕಂದಾಯ, ಪೊಲೀಸ್ ಇಲಾಖೆ ಅಧಿಕಾರಿಗಳು ಇತರರು ಇದ್ದರು.