ಕುಶಾಲನಗರ, ಸೆ. ೨೨: ಅಕ್ಟೋಬರ್ ೨೧ ರಂದು ಜಿಲ್ಲೆಯಲ್ಲಿ ಕಾವೇರಿ ನದಿ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಭರವಸೆ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ವತಿಯಿಂದ ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್ ಮತ್ತು ಕೆ.ಜಿ. ಬೋಪಯ್ಯ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸಂದರ್ಭ ಭರವಸೆ ನೀಡಿದ್ದಾರೆ. ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುವ ನದಿ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್, ನದಿ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ೨೦೨೧ ಡಿಸೆಂಬರ್ ತಿಂಗಳಲ್ಲಿ ನಡೆಯಬೇಕಾಗಿದ್ದ ಕಾವೇರಿ ನದಿ ಉತ್ಸವ ಕಾರಣಾಂತರಗಳಿAದ ಮುಂದೂಡಲ್ಪಟ್ಟಿತ್ತು. ಅಕ್ಟೋಬರ್ ೨೧ ರಂದು ಕೊಡಗು ಜಿಲ್ಲೆಯ ತಲಕಾವೇರಿ, ಭಾಗಮಂಡಲ, ಕುಶಾಲನಗರ ವ್ಯಾಪ್ತಿಯಲ್ಲಿ ನದಿ ಉತ್ಸವ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಮುಖ್ಯಮಂತ್ರಿಗಳನ್ನು ಹಾಗೂ ಸಚಿವರನ್ನು ಭೇಟಿ ಮಾಡಿದ ಸಂದರ್ಭ ಮಾಹಿತಿ ನೀಡಲಾಯಿತು.

ಈ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಪ್ರಮುಖರಾದ ಎಂ.ಎನ್. ಚಂದ್ರಮೋಹನ್, ರೀನಾ ಪ್ರಕಾಶ್, ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಪೊನ್ನಪ್ಪ, ಮಣಿ ನಂಜಪ್ಪ, ಗಗನ್ ಗಣಪತಿ, ಪ್ರತೀಶ್ ಇದ್ದರು.