ಸೋಮವಾರಪೇಟೆ, ಸೆ. ೨೨: ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಉತ್ತಮವಾಗಿ ವಿದ್ಯಾಭ್ಯಾಸ ಮಾಡುವ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಗೋಕುಲ್ ಅವರು ಕರೆ ನೀಡಿದರು.

ತಾಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ಕ್ಲಬ್ ಉದ್ಘಾಟನೆ ಮತ್ತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಮಾದಕ ವಸ್ತುಗಳ ಸೇವನೆ ಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದ ನ್ಯಾಯಾಧೀಶರು, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆ ಮೂಲಕ ಸದೃಢ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಕರೆಯಿತ್ತರು.

ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವಸ್ತುಗಳಿಗೆ ಬಲಿಯಾಗುತ್ತಿದೆ. ಮಾದಕ ವಸ್ತುಗಳ ಬಳಕೆ, ಮಾರಾಟ ತಡೆಗಟ್ಟು ವಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ವಿದ್ಯಾರ್ಥಿಗಳು ಉತ್ತಮ ಹವ್ಯಾಸ ಗಳನ್ನು ರೂಢಿಸಿಕೊಳ್ಳಬೇಕು ಎಂದರು.

ತಾಲೂಕು ವೈದ್ಯಾಧಿಕಾರಿ ಡಾ. ಶ್ರೀನಿವಾಸ್ ಮಾತನಾಡಿ, ಡ್ರಗ್ಸ್ ಸೇವನೆ ಅಪಾಯಕಾರಿಯಾಗಿದ್ದು, ಅದರ ಚಟಕ್ಕೆ ಒಮ್ಮೆ ಬಿದ್ದರೆ ಬದುಕು ದುಸ್ತರವಾಗುತ್ತದೆ. ಮಾದಕ ವಸ್ತುಗಳ ಬಳಕೆ ಹಾಗೂ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾಗಿದೆ. ಇಂತಹ ಘಟನೆಗಳು ಕಂಡುಬAದರೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡ ಬೇಕೆಂದರು. ಕಾಲೇಜು ಪ್ರಾಂಶುಪಾಲ ಬಿ.ಎಂ. ಬೆಳ್ಳಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಗೋಪಾಲಕೃಷ್ಣ, ಕ್ಲಬ್‌ನ ಕಾರ್ಯದರ್ಶಿ ಹೆಚ್.ಡಿ. ಸುಮಂತ್, ಸದಸ್ಯರಾದ ಸೈಫುದ್ದೀನ್, ದೀಪ್ತಿ, ಹಿರಿಯ ಉಪನ್ಯಾಸಕಿ ತಿಲೋತ್ತಮೆ, ನ್ಯಾಯಾಲಯ ಸಿಬ್ಬಂದಿ ಮೈನಾ, ಮಧು, ಉಪನ್ಯಾಸಕರಾದ ಹೇಮಕುಮಾರ್, ಸರಿತಾ, ಎನ್.ಎಂ. ಪೂಜಾ, ಬಿ.ಆರ್. ಪ್ರದೀಪ್, ಜಾನಪ ಪರಿಷತ್ ಕಾರ್ಯದರ್ಶಿ ಎಂ.ಎ. ರುಬೀನಾ ಸೇರಿದಂತೆ ಇತರರು ಉಪಸ್ಥಿತರಿದ್ದರು.