ಮಡಿಕೇರಿ, ಸೆ. ೨೬: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಿಕೇರಿ ತಾಲೂಕಿನ ಎಲ್ಲಾ ಸ್ಕೌಟ್ಸ್, ಗೈಡ್ಸ್, ಕಬ್, ಬುಲ್ ಬುಲ್ ವಿದ್ಯಾರ್ಥಿ ಗಳಿಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತರಾದ ಕೆ.ಟಿ. ಬೇಬಿ ಮ್ಯಾಥ್ಯೂ ಅವರು ಉದ್ಘಾಟಿಸಿ ಪ್ರತಿಯೊಬ್ಬರು ಉತ್ತಮ ಪ್ರಜೆಗಳಾಗಿ ಬದುಕಬೇಕೆಂದರು. ನೂತನ ಉಪಾಧ್ಯಕ್ಷರಾಗಿ ಕಡಗದಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಣ್ಣ ಅಧಿಕಾರ ಸ್ವೀಕರಿಸಿದರು. ಪ್ರಾಸ್ತಾವಿಕ ಭಾಷಣದಲ್ಲಿ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಒಳ್ಳೆಯ ಹೆಸರು ಮತ್ತು ಹವ್ಯಾಸಗಳನ್ನು ಮೈಗೂಡಿಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಬಿ.ಎನ್. ರಮೇಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಹಾಗೂ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಚಿಮ್ಮಂಡ ನೀಲಮ್ಮ, ತಂಗಮ್ಮ, ಜಿಲ್ಲಾ ಸಂಘಟಕರಾದ ದಮಯಂತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ ಹದಿನೆಂಟು ಶಾಲೆಗಳು ಭಾಗವಹಿಸಿದ್ದರು. ವಿದ್ಯಾರ್ಥಿ ಗಳಿಗೆ ವಿಭಾಗ ವಾರು ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಪ್ರಶಸ್ತಿ ಪತ್ರ ನೀಡಲಾಯಿತು. ಜಿಲ್ಲಾ ಕಾರ್ಯದರ್ಶಿ ಎಂ. ಎಂ. ವಸಂತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.