ಗುಡ್ಡೆಹೊಸೂರು, ಸೆ. ೨೮: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ೧೪ ರಿಂದ ೧೭ರ ವಯೋಮಿತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟಕ್ಕೆ ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್ ಚಾಲನೆ ನೀಡಿದರು. ಮೂರು ತಾಲೂಕಿನಿಂದ ವಿವಿಧ ಕ್ರೀಡೆಯಲ್ಲಿ ವಿಜೇತರಾದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದಿಂದ ತಲಾ ೮ ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು.
ಅನೇಕ ವರ್ಷ ಈ ಶಾಲೆಯಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ಇದೀಗ ಸೋಮವಾರಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳು ಕ್ರೀಡೆಯಲ್ಲಿ ಸೋಲು ಗೆಲುವು ಎರಡನ್ನು ಸಮವಾಗಿ ಸ್ವೀಕರಿಸಿ ಮುಂದಿನ ದಿನಗಳಲ್ಲಿ ಉತ್ತಮ ಪ್ರಯತ್ನದಲ್ಲಿ ಗೆಲುವು ಪಡೆಯಲು ಪ್ರಯತ್ನಿಸುವಂತೆ ತಂಡಗಳಿಗೆ ಕಿವಿಮಾತು ಹೇಳಿದರು. ಅಲ್ಲದೆ ಜಿಲ್ಲಾ ಮಟ್ಟದಲ್ಲಿ ಗೆಲುವು ಸಾಧಿಸಿದ ತಂಡಗಳು ಮುಂದಿನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಗೆದ್ದು ಜಿಲ್ಲೆಗೆ ಕೀರ್ತಿ ತರುವಂತೆ ತಿಳಿಸಿದರು.
ಈ ಸಂದÀರ್ಭ ಇಲ್ಲಿನ ಪ್ರಾಂಶುಪಾಲರಾದ ಶ್ರೀದೇವಿ ಎಸ್.ಎಸ್., ಶಾಲಾ ಶಿಕ್ಷಕ ವೃಂದ ಮತ್ತು ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ ದೈಹಿಕ ಶಿಕ್ಷಕರು ಹಾಜರಿದ್ದರು. ಇಲ್ಲಿ ವಿಜೇತರಾದ ತಂಡದವರು ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಭಾಗವಹಿಸಬೇಕಾಗಿದೆ.