ಮಡಿಕೇರಿ, ಸೆ. ೨೯: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಕಾರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಜಿಲ್ಲೆಯ ಹಿರಿಯ ನಾಗರಿಕರ ಸಪ್ತಾಹ ಅಂಗವಾಗಿ ಜಾಥಾಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಸಾದ್ ಅವರು ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಮಾತನಾಡಿ, ಹಿರಿಯ ನಾಗರಿಕರಿಗೆ ಸರ್ಕಾರದಿಂದ ಪಿಂಚಣಿ ಸೌಲಭ್ಯ ದೊರೆಯಲಿದ್ದು, ಈ ಸೌಲಭ್ಯವನ್ನು ಅರ್ಹರು ಪಡೆದುಕೊಳ್ಳುವಂತಾಗಬೇಕು ಎಂದು ತಿಳಿಸಿದರು.
ಹಿರಿಯ ನಾಗರಿಕರಲ್ಲಿ ಯಾರಿಗೆ ಪಿಂಚಣಿ ದೊರೆತಿಲ್ಲ. ಅಂತವರು ಆಧಾರ್ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಖಾತೆ ಮಾಡಿಸಿಕೊಂಡು, ಪಿಂಚಣಿಗೆ ಅರ್ಜಿ ಸಲ್ಲಿಸುವಂತೆ, ಮಕ್ಕಳು ಉತ್ತಮ ಸ್ಥಿತಿಯಲ್ಲಿದ್ದು, ಪೋಷಕರನ್ನು ನೋಡಿಕೊಳ್ಳದ ಕುಟುಂಬದ ಹಿರಿಯರು ಇದ್ದಲ್ಲಿ ಅಂತಹ ಕುಟುಂಬದವರ ಬಗ್ಗೆ ಮಾಹಿತಿ ಪಡೆದು ಹಿರಿಯ ನಾಗರಿಕರ ಕಾಯ್ದೆಯಂತೆ ಅಗತ್ಯ ಕ್ರಮವಹಿಸಬೇಕು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಸಾದ್ ಅವರು ಮಾತನಾಡಿ, ಹಿರಿಯ ನಾಗರಿಕರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಜೀವನ ನಡೆಸುವಂತಾಗಬೇಕು ಎಂದು ಸಲಹೆ ಮಾಡಿದರು.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿಮಲ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ೧೮ ಸಾವಿರ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಲಾಗಿದೆ ಎಂದು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಹೊರಟ ಜಾಥಾವು ನಗರಸಭೆವರೆಗೆ ನಡೆಯಿತು. ನಂತರ ನಗರಸಭೆಯ ಕಾವೇರಿ ಕಲಾಕ್ಷೇತ್ರದಲ್ಲಿ ಆರೋಗ್ಯ ತಪಾಸಣಾ ಶಿಬಿರ ಜರುಗಿತು.
ಸುಮಾರು ೭೫ಕ್ಕೂ ಹೆಚ್ಚು ಹಿರಿಯ ನಾಗರಿಕರು ಜಾಥಾದಲ್ಲಿ ಪಾಲ್ಗೊಂಡಿದ್ದರು, ಅಕ್ಟೋಬರ್ ೧ ರಂದು ನಡೆಯುವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಜಾಥಾ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎನ್. ಮಂಜುನಾಥ್, ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿಗಳು ಇತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.