ಮಡಿಕೇರಿ, ಸೆ. ೩೦: ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸುವ ಉದ್ದೇಶದಿಂದ ಎಲ್ಲಾ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ಒಣ ಮತ್ತು ಹಸಿ ಕಸ ಬೇರ್ಪಡಿಸಿ ಸ್ವಚ್ಛತಾ ವಾಹನಕ್ಕೆ ನೀಡಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಹೇಳಿದರು.

ಕಡಗದಾಳು ಗ್ರಾ.ಪಂ. ಆವರಣದಲ್ಲಿ ಸಂಜೀವಿನಿ ಒಕ್ಕೂಟದ ವತಿಯಿಂದ ದಿನಬಳಕೆ ವಸ್ತುಗಳ ಸಂಜೀವಿನಿ ಸಂತೆ ಮೇಳ ಹಾಗೂ ಕಸ ವಿಲೇವಾರಿ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ

(ಮೊದಲ ಪುಟದಿಂದ) ಪಾಲ್ಗೊಂಡು ಅವರು ಮಾತನಾಡಿದರು.

ಕೊಡಗು ಹಚ್ಚ ಹಸುರಿನಿಂದ ಕೂಡಿದ ಪ್ರದೇಶವಾಗಿರುವುದರಿಂದ ಪ್ರವಾಸಿಗರು ಪ್ರಕೃತಿ ಸೌಂದರ್ಯವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹಾಗಾಗಿ ಪರಿಸರದ ಸೌಂದರ್ಯವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ.

ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು. ಪ್ಲಾಸ್ಟಿಕ್ ಬಾಟಲಿ ಮತ್ತಿತರ ಪ್ಲಾಸ್ಟಿಕ್ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡಬಾರದು. ಪರಿಸರದ ಬಗ್ಗೆ ಪ್ರವಾಸಿಗರು ಬಂದಾಗ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ಮಹಿಳೆಯರು ಆರ್ಥಿಕವಾಗಿ ಸಬಲರಾಗುವಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳುವಂತಾಗಬೇಕು. ಹಳ್ಳಿಗಳಲ್ಲಿನ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ ನಷ್ಟಕ್ಕೆ ಒಳಗಾಗುತ್ತಾರೆ. ಮುಂದಿನ ದಿನಗಳಲ್ಲಿ ರೈತರು ತಾವು ಬೆಳೆದ ಬೆಳೆಗಳನ್ನು ಮಾರುಕಟ್ಟೆಯಲ್ಲಿ ಸ್ವತಃ ಮಾರಾಟ ಮಾಡಬೇಕು. ಇದರಿಂದ ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ. ಹಾಗೂ ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತದೆ ಎಂದು ಶಾಸಕರು ಹೇಳಿದರು.

ಕಡಗದಾಳು ಗ್ರಾ.ಪಂ. ಅಧ್ಯಕ್ಷ ಬಿ.ಟಿ. ಜಯಣ್ಣ, ತಾಲೂಕು ವಲಯ ಮೇಲ್ವಿಚಾರಕಿ ಶ್ವೇತಾ, ಗ್ರಾ.ಪಂ. ಉಪಾಧ್ಯಕ್ಷರು, ಸದಸ್ಯರು, ಇತರರು ಇದ್ದರು.