ಮಡಿಕೇರಿ, ಅ. ೭: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತರಾದ ಕಾರ್ಮಿಕರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಎಸ್‌ಆರ್‌ಟಿಸಿ ಉಚಿತ ಬಸ್‌ಪಾಸ್ ಯೋಜನೆಗೆ ಚಾಲನೆ ನೀಡಿದ್ದಾರೆ.

ಕೊಡಗು ಜಿಲ್ಲೆಯಲ್ಲಿಯೂ ಸಹ ಈ ಯೋಜನೆಯು ಜಾರಿಗೆ ಬಂದಿದ್ದು, ಜಿಲ್ಲೆಯಲ್ಲಿನ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕೆಎಸ್‌ಆರ್ ಟಿಸಿ ಉಚಿತ ಬಸ್‌ಪಾಸ್ ಸೌಲಭ್ಯವನ್ನು ಪಡೆದುಕೊಳ್ಳಲು ‘ಗ್ರಾಮ ಒನ್’ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಪಾಸ್ ಪಡೆಯಲು ಯಾವುದೇ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಿ, ಅಲ್ಲಿಯೇ ಸ್ಮಾರ್ಟ್ ಕಾರ್ಡ್ ಮಾದರಿಯ ಬಸ್‌ಪಾಸ್‌ಗಳನ್ನು ಪಡೆದು ಕೊಳ್ಳಲು ಹಾಗೂ ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಬಿ. ಅನಿಲ್ ಬಗಟಿ ಅವರು ತಿಳಿಸಿದ್ದಾರೆ. ಬಸ್‌ಪಾಸ್‌ಗಾಗಿ ಅರ್ಜಿ ಸಲ್ಲಿಸುವ ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಯಾಗಿರಬೇಕು ಹಾಗೂ ನೋಂದಣಿ ಚಾಲ್ತಿಯಲ್ಲಿರಬೇಕು.

ಗ್ರಾಮ ಒನ್‌ನಲ್ಲಿ ಅರ್ಜಿ ಸಲ್ಲಿಸಲು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿAದ ಪಡೆದ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಇರಬೇಕೆಂದು ಕಾರ್ಮಿಕ ಅಧಿಕಾರಿ ಅವರು ತಿಳಿಸಿದ್ದಾರೆ.