ಕೂಡಿಗೆ, ಅ. ೧೦: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಅಳುವಾರ ಗ್ರಾಮದಲ್ಲಿರುವ ಸ್ನಾತಕೋತ್ತರ ಕೇಂದ್ರದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಸರಕಾರದ ಹೊಸ ಯೋಜನೆಯಂತೆ ಸಮಾಜ ಕಲ್ಯಾಣ ಇಲಾಖೆ ಮತ್ತು ಬಿಸಿಎಂ ಇಲಾಖೆಯ ವತಿಯಿಂದ ಸ್ನಾತಕೋತ್ತರ ಕೇಂದ್ರದಲ್ಲಿ ಈಗಾಗಲೇ ನಿಗದಿ ಯಾಗಿರುವ ವಿದ್ಯಾರ್ಥಿಗಳಿಗೆ ವಸತಿ ನಿಲಯ ತೆರೆಯುವ ಬಗ್ಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಕೇಂದ್ರಕ್ಕೆ ತೆರಳಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ಥಳ ಪರಿಶೀಲನೆ ನಡೆಸಿದರು.

ರಾಜ್ಯ ಮತ್ತು ಜಿಲ್ಲೆಯ ಅಧಿಕಾರಿಗಳ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಕ್ರಿಯಾ ಯೋಜನೆ ತಯಾರಿಸುವ ಹಂತದಲ್ಲಿ ಸುಸಜ್ಜಿತವಾದ ಕಟ್ಟಡ ನಿರ್ಮಾಣಕ್ಕೆ ಅನುಕೂಲವಾಗುವ ರೀತಿಯಲ್ಲಿ ಪರಿಶೀಲನೆ ನಡೆಯಿತು. ಮುಂದಿನ ದಿನಗಳಲ್ಲಿ ಸ್ನಾತಕೋತ್ತರ ಕೇಂದ್ರದಲ್ಲಿ ವರ್ಷದಿಂದ ವರ್ಷಕ್ಕೆ ವಿಧ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವ, ಮತ್ತು ಅಂತರ ರಾಜ್ಯದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚು ಇರುವುದರಿಂದಾಗಿ ಸುಸಜ್ಜಿತ ವಸತಿ ನಿಲಯ ವ್ಯವಸ್ಥೆಯನ್ನು ಮಹಿಳಾ ಮತ್ತು ಪುರುಷ ವಿಭಾಗದ ನಿಲಯಗಳನ್ನು ತೆರೆಯುವ ಬಗ್ಗೆ ಶಾಸಕರು ಅಧಿಕಾರಿಗಳಿಂದ ಸಮಗ್ರವಾದ ಮಾಹಿತಿಯನ್ನು ಪಡೆದು, ಮುಂದಿನ ದಿನಗಳಲ್ಲಿ ಈ ಯೋಜನೆ ಗಳನ್ನು ಕಾರ್ಯಗತಗೊಳಿಸುವ ಭರವಸೆಯನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಮಹೇಶ್, ಉಪಾಧ್ಯಕ್ಷ ಎಂ.ಟಿ. ಬೇಬಿ, ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ. ಚಂದ್ರಶೇಖರಯ್ಯ, ಸದಸ್ಯರಾದ ಕೆ.ಬಿ. ದೇವರಾಜ್, ಟಿ.ಸಿ. ಶಿವಕುಮಾರ್, ನಿಂಗಾಜಮ್ಮ ಸಾವಿತ್ರಿ, ತೀರ್ಥಾನಂದ, ಮಹ ದೇವ, ಶೋಭಾ, ಸ್ನಾತಕೋತ್ತರ ಅಭಿವೃದ್ಧಿ ಸಮಿತಿಯ ಸದಸ್ಯರು, ಕೇಂದ್ರದ ಪ್ರಾಧ್ಯಾಪಕ ವೃಂದ, ಶಾಸಕರ ಆಪ್ತ ಕಾರ್ಯದರ್ಶಿ ರವಿ ಸೇರಿದಂತೆ ಅಧಿಕಾರಿ ವರ್ಗದವರು ಹಾಜರಿದ್ದರು.