ಮಡಿಕೇರಿ, ಅ. ೧೫: ಪವಿತ್ರ ಕೇತ್ರ ತಲಕಾವೇರಿಯಲ್ಲಿ ಜೀವನದಿ ಕಾವೇರಿಯ ತೀರ್ಥೋದ್ಭವಕ್ಕೆ ದಿನಗಣನೆ ಆರಂಭಗೊAಡಿದೆ. ಈ ನಡುವೆ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರ ಹಾಗೂ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಪ್ಲಾಸ್ಟಿಕ್ ಬಳಕೆ ನಿರ್ಭಯವಾಗಿ ನಡೆಯುತ್ತಿದೆ. ಇದಕ್ಕೆ ತಕ್ಷಣ ಕಡಿವಾಣ ಹಾಕಿ ತಲಕಾವೇರಿ ಹಾಗೂ ಭಾಗಮಂಡಲ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಬೇಕೆಂದು ಕೊಡಗು ರಕ್ಷಣಾ ವೇದಿಕೆ ಒತ್ತಾಯಿಸಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಕೊರವೇ ಅಧ್ಯಕ್ಷ ಅಚ್ಚಂಡಿರ ಪವನ್ ಪೆಮ್ಮಯ್ಯ, ಕಳೆದ ವಾರ ಮಡಿಕೇರಿ ದಸರಾ ಜನೋತ್ಸವದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳು ರಾರಾಜಿಸಿವೆ. ಇದೇ ಪರಿಸ್ಥಿತಿ ಕಾವೇರಿ ತುಲಾ ಸಂಕ್ರಮಣದ ಸಂದರ್ಭ ಪುಣ್ಯ ಕ್ಷೇತ್ರಗಳಲ್ಲಿ ಪುನರಾವರ್ತನೆಯಾಗುವ ಸಾಧ್ಯತೆಗಳಿದ್ದು, ತಕ್ಷಣ ಜಿಲ್ಲಾಡಳಿತ ಹಾಗೂ ಸ್ಥಳೀಯ ಗ್ರಾ.ಪಂ. ಆಡಳಿತ ಮಂಡಳಿ ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಿದ್ದಾರೆ. ತಲಕಾವೇರಿ ಹಾಗೂ ಭಾಗಮಂಡಲ ಕ್ಷೇತ್ರದಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಬೇಕು, ರಸ್ತೆ ಬದಿ ವ್ಯಾಪಾರಿಗಳಿಗೆ ಪ್ಲಾಸ್ಟಿಕ್ ಚೀಲಗಳನ್ನು ಮಾರಾಟ ಮಾಡದಂತೆ ಮತ್ತು ಎಲ್ಲೆಂದರಲ್ಲಿ ಕಸ ಹಾಕದಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.