ಮಡಿಕೇರಿ, ಅ. ೧೬: ಕೊಡಗು ಜಿಲ್ಲಾ ಜನರಲ್ ವಕರ್ಸ್ ಸಮಿತಿಯಿಂದ ತಾ. ೧೯ ರಂದು ವೀರಾಜಪೇಟೆ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಾದೇವ್ ತಿಳಿಸಿದ್ದಾರೆ.
ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿವೇಶನ ರಹಿತರಿಗೆ ಕೂಡಲೇ ನಿವೇಶನ ಒದಗಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಕಚೇರಿ ಎದುರು ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಅದೇ ದಿನ ಮಧ್ಯಾಹ್ನ ೧ ಗಂಟೆಗೆ ಕಾಡಾನೆ ಹಾವಳಿ ತಡೆಗೆ ಆಗ್ರಹಿಸಿ ವೀರಾಜಪೇಟೆ ಅರಣ್ಯ ಭವನದ ಎದುರು ಪ್ರತಿಭಟಿಸಲಾಗುವುದು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳಾದ ರಾಚಪ್ಪಾಜಿ, ವಿನೋದ್, ಪಾಪಣ್ಣ, ಮನೋಜ್ ಉಪಸ್ಥಿತರಿದ್ದರು.