ನವದೆಹಲಿ, ಅ. ೧೯: ಕಾಂಗ್ರೆಸ್ ಪಕ್ಷದಲ್ಲಿ ಯಾರೂ ದೊಡ್ಡವರು ಅಥವಾ ಚಿಕ್ಕವರು ಎಂಬುದಿಲ್ಲ. ಪಕ್ಷ ಸಂಘಟನೆಯನ್ನು ಬಲಪಡಿಸಲು ಕಾಂಗ್ರೆಸ್‌ನ ನಿಜವಾದ ಸೈನಿಕನಂತೆ ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

೨೦೧೯ ರ ಲೋಕಸಭಾ ಚುನಾವಣೆಯ ನಂತರ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರ ಪಕ್ಷದ ಚುಕ್ಕಾಣಿ ಹಿಡಿದಿರುವ ಸೋನಿಯಾ ಗಾಂಧಿಯವರಿAದ ತಾ. ೨೬ ರಂದು ಖರ್ಗೆ ಅವರು ಅಧಿಕೃತವಾಗಿ

ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ನನಗೆ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಸಮಾನರು ಮತ್ತು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಬೆದರಿಕೆ ಹಾಕುವ ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದರು. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಮೂಲಕ

ಕಾಂಗ್ರೆಸ್ ಸಂಘಟನೆಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಹೇಗೆ ಪ್ರಬಲವಾಗಿದೆ ಎಂಬುದನ್ನು ದೇಶಕ್ಕೆ ತೋರಿಸಿಕೊಟ್ಟಿದೆ ಎಂದು ಖರ್ಗೆ ತಿಳಿಸಿದರು. ಸಂಘಟನೆಯನ್ನು ಬಲಪಡಿಸಲು ನಾವೆಲ್ಲರೂ ಕಾರ್ಯಕರ್ತರಂತೆ ಕೆಲಸ ಮಾಡಬೇಕು ಎಂದು ಖರ್ಗೆ ಹೇಳಿದರು. "ಸರ್ವಾಧಿಕಾರ"ಕ್ಕಾಗಿ ದೇಶವನ್ನು ಬಲಿಕೊಡಲು ಸಾಧ್ಯವಿಲ್ಲ. ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಒಟ್ಟಾಗಿ ಈ "ವಿನಾಶಕಾರಿ" (ವಿಧ್ವಂಸಕ) ಶಕ್ತಿಗಳ ವಿರುದ್ಧ ಹೋರಾಡಬೇಕಾಗಿದೆ ಎಂದು ಅವರು ಹೇಳಿದರು.

ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಳೆದ ಸೋಮವಾರ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಮಲ್ಲಿಕಾರ್ಜುನ್ ಖರ್ಗೆ ಅವರು ಪ್ರತಿಸ್ಪರ್ಧಿ ಶಶಿ ತರೂರ್ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ನೂತನ

(ಮೊದಲ ಪುಟದಿಂದ) ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿ ಅಭಿನಂದಿಸಿದರು. ಸೋನಿಯಾ ಗಾಂಧಿ ಜೊತೆ ಆಗಮಿಸಿದ ಅವರ ಪುತ್ರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಹ ನೂತನ ಅಧ್ಯಕ್ಷ ಖರ್ಗೆ ಅವರನ್ನು ಅಭಿನಂದಿಸಿದರು. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರ ಪತ್ನಿ ಹಾಗೂ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಸಹ ಇದ್ದರು. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಳೆದ ಸೋಮವಾರ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಚಲಾವಣೆಯಾದ ಒಟ್ಟು ೯೩೮೫ ಮತಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ೭೮೯೭ ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಸಂಸದ ಶಶಿ ತರೂರ್ ೧,೦೭೨ ಮತಗಳನ್ನು ಪಡೆದಿದ್ದಾರೆ. ೪೦೦ಕ್ಕೂ ಹೆಚ್ಚು ಮತಗಳು ತಿರಸ್ಕೃತಗೊಂಡಿವೆ. ಈ ಮೂಲಕ ೨೪ ವರ್ಷಗಳ ನಂತರ ಗಾಂಧಿಯೇತರರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.