ಕೂಡಿಗೆ, ಅ. ೨೩: ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಕಾಯ್ದಿರಿಸಿದ ಜಾಗದಲ್ಲಿ ನಿವೇಶನ ರಹಿತರಿಗೆ ಕಂದಾಯ ಇಲಾಖೆ ನಿಯಮನುಸಾರವಾಗಿ ಅರ್ಹ ಫಲಾನುಭವಿಗಳಿಗೆ ವಸತಿ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ತಿಳಿಸಿದ್ದಾರೆ.

ಅವರು ಕೂಡಿಗೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನಿವೇಶನ ರಹಿತರು ಶಾಸಕರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದ ಸಂದರ್ಭದಲ್ಲಿ ಈ ಬಗ್ಗೆ ತಿಳಿಸಿದರು. ಈಗಾಗಲೇ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಮತ್ತು ಹುದುಗೂರು ವ್ಯಾಪ್ತಿಯಲ್ಲಿ ಈಗಾಗಲೇ ನಿಗದಿಯಾದ ಸ್ಥಳದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನವನ್ನು ಕಂದಾಯ ಇಲಾಖೆಯ ನಿಯಮಾನುಸಾರವಾಗಿ ಅರ್ಹ ಫಲಾನುಭವಿಗಳಿಗೆ ನೀಡಲಾಗುವುದು ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡು ಕಡೆಗಳಲ್ಲಿ ಜಾಗವನ್ನು ಗುರುತಿಸಲಾಗಿದೆ ಸ್ಥಳೀಯ ಮತ್ತು ಕಂದಾಯ ಇಲಾಖೆ ದಾಖಲೆಗಳ ಆಧಾರದ ಮೇಲೆ ಸ್ಥಳ ಪರಿಶೀಲನೆ ನಡೆಸಿ ಅರ್ಹ ಫಲಾನುಭವಿಗಳಿಗೆ ನಿವೇಶನವನ್ನು ನೀಡಲಾಗುವುದು.

ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನತ್ತೂರು ಗ್ರಾಮದಲ್ಲಿ ಈಗಾಗಲೇ ಕಾಯ್ದಿರಿಸಿದ ಜಾಗದಲ್ಲಿ ಅರ್ಹ ಫಲಾನುಭವಿಗಳಿಗೆ ಮತ್ತು ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ಕಾದಿರಿಸುವ ಎರಡು ಎಕರೆಗಳಷ್ಟು ಪ್ರದೇಶದಲ್ಲಿ ವಸತಿ ರಹಿತರಿಗೆ ನಿವೇಶನ ನೀಡುವ ಸಲುವಾಗಿ ಕಂದಾಯ ಇಲಾಖೆಯ ವತಿಯಿಂದ ಸರ್ವೆ ಕಾರ್ಯ ನಡೆದಿದೆ, ಅದರಂತೆ ಗ್ರಾಮ ಪಂಚಾಯಿತಿಯ ಗ್ರಾಮ ಸಭೆ ಮತ್ತು ಮಾಸಿಕ ಸಭೆಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ವಿವಿಧ ಯೋಜನೆಯ ಅಡಿಯಲ್ಲಿ ನಿವೇಶನ ನೀಡಲು ಈಗಾಗಲೇ ಪಟ್ಟಿ ತಯಾರಾಗಿದೆ. ಅದರ ಅನುಗುಣವಾಗಿ ಅರ್ಹ ಫಲಾನುಭವಿಗಳಿಗೆ ಅತಿ ಶೀಘ್ರದಲ್ಲಿ ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಭಾಸ್ಕರ್ ನಾಯಕ್, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್, ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ಸದಸ್ಯ ಗಿರೀಶ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಮಣಿ ಕುಮಾರ್, ಚಂದ್ರು ಮೂಡ್ಲಿಗೌಡ, ಕೂಡುಮಂಗಳೂರು ಬಿಜೆಪಿ ಶಕ್ತಿ ಕೇಂದ್ರದ ಪ್ರವೀಣ್, ಮಂಜುನಾಥ ಸೇರಿದಂತೆ ಬೂತ್ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.