ಸೋಮವಾರಪೇಟೆ, ಅ. ೨೮: ಇಲ್ಲಿನ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ನ. ೧ ರಂದು ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಹೆಚ್.ಕೆ. ಗಂಗಾಧರ್ ತಿಳಿಸಿದರು.

ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೭ ಗಂಟೆಗೆ ಆಟೋ ನಿಲ್ದಾಣದಲ್ಲಿ ಧ್ವಜಾರೋಹಣ ನಡೆಸಲಾಗುವುದು. ನಂತರ ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಲಾಗುವುದು ಎಂದರು.

ಬೆಳಿಗ್ಗೆ ೮.೩೦ಕ್ಕೆ ಕಕ್ಕೆಹೊಳೆ ಬಳಿಯಿಂದ ಡೊಳ್ಳು ಕುಣಿತದೊಂದಿಗೆ ಆಟೋಗಳ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ನಡೆಯುವುದು. ೧೦ ಗಂಟೆಗೆ ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಕುಣಿಯೋಣ ಬಾರಾ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಮಾಜಿ ಸಚಿವ ಬಿ.ಎ. ಜೀವಿಜಯ, ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಜಿ. ಮೇದಪ್ಪ, ವೀಣಾ ಅಚ್ಚಯ್ಯ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಉಪಾಧ್ಯಕ್ಷ ಬಿ. ಸಂಜೀವ ಹಾಗೂ ಸದಸ್ಯರು, ಮುಖ್ಯಾಧಿಕಾರಿ ನಾಚಪ್ಪ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.

ಸಂಜೆ ೬ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಹೆಚ್.ಕೆ. ಗಂಗಾಧರ್ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಉದ್ಯಮಿ ಅವಿನಾಶ್ ಕೇಸರಿ, ಮಧುಕರ್, ಗುತ್ತಿಗೆದಾರ ಕೆ.ಟಿ. ಸತೀಶ್, ಕೊಡಗು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅನಂತಕುಮಾರ್, ಯುವ ಮುಖಂಡ ಮಂಥರ್ ಗೌಡ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹೆಚ್.ಎನ್. ರವೀಂದ್ರ, ಆಟೋ ಚಾಲಕರ ಸಂಘದ ಮಾಜಿ ಅಧ್ಯಕ್ಷ ಆರ್. ಮೋಹನ್, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರಾದ ಸತೀಶ್, ಯಂಗ್ ಇಂಡಿಯನ್ ಫಾಮರ‍್ಸ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ, ಮಾಜಿ ಸೈನಿಕರಾದ ಎನ್.ಯು. ಚಂದ್ರಕುಮಾರ್ ಅವರುಗಳನ್ನು ಸನ್ಮಾನಿಸಲಾಗುವುದು ಎಂದು ಗಂಗಾಧರ್ ಮಾಹಿತಿಯಿತ್ತರು.

ಅತೀ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಕಾರ್ಯಕ್ರಮದಲ್ಲಿ ಪ್ರೋತ್ಸಾಹ ಧನ ವಿತರಿಸಲಾಗುವುದು. ರಾತ್ರಿ ಗಾಯಕರು ಮತ್ತು ಸಂಗೀತ ನಿರ್ದೇಶಕರಾದ ಮಹೇಶ್ ಕರ್ಣ ಹಾಗೂ ತಂಡದವರಿAದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಅಬ್ದುಲ್ ಕರೀಂ, ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜನಾರ್ಧನ್, ಖಜಾಂಚಿ ಸುದೀಪ್ ಆಲ್ಬರ್ಟ್ ಹಾಗೂ ಪಿ.ಎನ್. ರಮೇಶ್ ಉಪಸ್ಥಿತರಿದ್ದರು.