ಸೋಮವಾರಪೇಟೆ, ಅ. ೨೮: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಳೂರುಶೆಟ್ಟಳ್ಳಿ ಹಾಗೂ ಸುಭಾಸ್ ನಗರ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಿತಿಮೀರಿದ್ದು, ಇದಕ್ಕೆ ಕಡಿವಾಣ ಹಾಕಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಸ್ಥಳೀಯ ಪಂಚಾಯಿತಿ, ಅಬಕಾರಿ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಪ್ರತಿಭಟನೆ ನಡೆಸುವುದಾಗಿ ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.
ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ಹೆಚ್ಚಾಗಿದೆ. ಇದನ್ನು ತಡೆಯುವಲ್ಲಿ ಪಂಚಾಯಿತಿ, ಅಬಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮ ನಿವಾಸಿಗಳು, ಸ್ಥಳೀಯ ದಿನಸಿ ಅಂಗಡಿ, ಸುಭಾಸ್ ನಗರಕ್ಕೆ ತೆರಳುವ ಮಾರ್ಗದ ವ್ಯಕ್ತಿಯೊಬ್ಬರ ಮನೆ, ಸೇರಿದಂತೆ ವಿವಿಧ ಕಡೆಗಳಲ್ಲಿ ಕೆಲವರು ಹಲವಾರು ವರ್ಷಗಳಿಂದ ಹೆಚ್ಚಿನ ದರಕ್ಕೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ಭಾಗದಲ್ಲಿ ದಿನಗೂಲಿ ನೌಕರರೇ ಹೆಚ್ಚಾಗಿದ್ದು, ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ನೆಮ್ಮದಿ ಇಲ್ಲದಂತಾಗಿದೆ. ಇದರಿಂದ ದಿನದಿಂದ ದಿನಕ್ಕೆ ಕುಡುಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಗ್ರಾಮದ ವಾತಾವರಣ ಸಂಪೂರ್ಣ ಹದಗೆಟ್ಟಿದೆ. ಸ್ಥಳೀಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರು, ಸದಸ್ಯರಿಗೆ ಇದರ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಸಂಬAಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಅಕ್ರಮ ಮದ್ಯ ಮಾರಾಟಕ್ಕೆ ತಡೆಯೊಡ್ಡಬೇಕು. ತಪ್ಪಿದ್ದಲ್ಲಿ ಗ್ರಾಮಸ್ಥರು, ಸ್ತಿçÃಶಕ್ತಿ ಸ್ವಸಹಾಯ ಸಂಘಗಳ ಸಹಕಾರದೊಂದಿಗೆ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸತೀಶ್, ಅಭಿಜಿತ್, ಪ್ರವೀಣ್ ಸೇರಿದಂತೆ ಇತರರು ಎಚ್ಚರಿಸಿದ್ದಾರೆ.