ವೀರಾಜಪೇಟೆ, ಅ.೩೦: ಕೊಡವ ಮುಸ್ಲಿಂ ಅಸೋಸಿಯೇಷನ್ ಶಿಕ್ಷಣದ ಕಡೆಗೆ ಹೆಚ್ಚು ಒತ್ತು ನೀಡುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸು ತ್ತಿರುವುದು ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಹೇಳಿದರು.

ಕೊಡವ ಮುಸ್ಲಿಂ ಅಸೋಸಿಯೇಷನ್ ಶಿಕ್ಷಣ ನಿಧಿ ವತಿಯಿಂದ ನಗರದ ಸೆರಿನಿಟಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕೆ.ಎಂ.ಎ ಪ್ರತಿಭಾ ಪುರಸ್ಕಾರ ೨೦೨೨ ಹಾಗೂ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಗಿಡಕ್ಕೆ ನೀರು ಎರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಸ್ಲಿಂ ಭಾಂದವರು ಒಗ್ಗಟ್ಟಿನಿಂದ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಕರೆ ನೀಡಿದರು.

ಅತಿಥಿಯಾಗಿದ್ದ ಹೈಕೋರ್ಟ್ನ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಹೆಚ್ಚು ಗಮನ ಹರಿಸುವ ಮೂಲಕ ಸಿಗುವಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಬೇಕು ಎಂದರು.

ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಇಂದಿನ ದಿನದಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕಾಗಿದ್ದು ಕಳೆದ ಎರಡು ವರ್ಷಗಳಲ್ಲಿ ಕೊರೊನಾ ಕಾರಣದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಸಾಧ್ಯವಾಗಿರಲಿಲ್ಲ ಎಂದರು. ಜನಾಂಗದ ಅಭಿವೃದ್ಧಿಗೆ ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟರೂ ಇದುವರೆಗೆ ಗಮನ ಹರಿಸಿಲ್ಲ ಎಂದು ವಿಷಾದಿಸಿದರು.

ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷö್ಮಣ್ ಅವರು ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಮೂಲಕ ಸಿಗುವ ಅವಕಾಶಗಳನ್ನು ಬಳಸಿಕೊಂಡು ಛಲದಿಂದ ತಮ್ಮ ಗುರಿ ಮುಟ್ಟುವುದರೊಂದಿಗೆ ಜೀವನವನ್ನು ರೂಪಿಸಿಕೊಳ್ಳುವಂತಾಗಬೇಕು ಎಂದರು. ಕೊರೊನಾ ಸಂದರ್ಭ ಸಾರ್ವಜನಿಕರಿಗೆ ಸೇವೆ ಸಲ್ಲಿಸಿದ್ದ ಮೂರ್ನಾಡಿನ ಹಿರಿಯ ವೈದ್ಯರಾದ ಡಾ. ಜೋಯಿಪೆರ ಎ.ಕುಂಞಬ್ದುಲ್ಲಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಮುಂಬೈ ಉದ್ಯಮಿ ಅಕ್ಕಳತಂಡ ಎಸ್.ಮೊಯ್ದು, ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ರಫೀಕ್ ತೊಚಮಕೇರಿ ಉಪಸ್ಥಿತರಿದ್ದರು.

ಎಂ.ಎA.ಇಸ್ಮಾಯಿಲ್ ಸ್ವಾಗತಿಸಿದರು. ಮುಸ್ಕಾನ್ ಸೂಫಿ ಮತ್ತು ನಿಷ್ಮಾ ಮೊಯ್ದು ನಿರೂಪಿಸಿದರೆ, ಕೆ.ಎ.ಅಬ್ದುಲ್ ರಶೀದ್ ವಂದಿಸಿದರು. ೩೦ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.