ಮಡಿಕೇರಿ, ನ. ೬: ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಗಮನ ಹರಿಸುವಂತೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಸಲಹೆ ನೀಡಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ೨೦೨೨-೨೩ನೇ ಸಾಲಿನ ಪಠ್ಯೇತರ ಮತ್ತು ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನವನ್ನು ಬಳಸಿಕೊಂಡು ಕಾಲಘಟ್ಟಕ್ಕೆ ತಕ್ಕಂತೆ ಮಾಹಿತಿಯನ್ನು ತಿಳಿದುಕೊಳ್ಳಬೇಕು. ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಲು ಸಹಕಾರಿಯಾಗಲಿದೆ.
ಪ್ರತಿಯೊಬ್ಬ ವಿದ್ಯಾರ್ಥಿಯೂ ಪಠ್ಯ ವಿಷಯದ ಜೊತೆಗೆ ವಿಜ್ಞಾನ, ತಂತ್ರಜ್ಞಾನ, ಕೃಷಿ, ಕೈಗಾರಿಕೆ, ಆರ್ಥಿಕತೆ ಹೀಗೆ ಪ್ರತಿಯೊಂದು ಕ್ಷೇತ್ರದ ಬಗ್ಗೆಯೂ ಸಾಮಾನ್ಯ ಜ್ಞಾನ ಇರಬೇಕು. ತಿಳಿದುಕೊಳ್ಳಲು ಪ್ರಯತ್ನಿಸಬೇಕು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗ್ರಾಮೀಣ ಪ್ರದೇಶಕ್ಕೂ ಅಂತರ್ಜಾಲ ಸಂಪರ್ಕ ಕಲ್ಪಿಸಲು ಮುಂದಾಗಿದ್ದಾರೆ. ತಂತ್ರಜ್ಞಾನವನ್ನು ಸರಿಯಾಗಿ ಬಳಸಿಕೊಳ್ಳಬೇಕು. ಪ್ರಪಂಚ ಅಭಿವೃದ್ಧಿಯತ್ತ ಸಾಗುತ್ತಿದ್ದು, ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಜ್ಞಾನ ಪಡೆದುಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಕರೆ ನೀಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ತಜ್ಞರು ಹಾಗೂ ಮಾಜಿ ಸೇನಾಧಿಕಾರಿ ಮೇಜರ್ ಡಾ. ಕುಶ್ವಂತ್ ಕೋಳಿಬೈಲು ಮಾತನಾಡಿ, ಸಾಹಿತ್ಯ ಸಮಾಜವನ್ನು ಪರಿಚಯಿಸುತ್ತದೆ. ಪದವಿಗಳು ಉದ್ಯೋಗ ಕೊಡುತ್ತದೆ. ಹಾಗೆಯೇ ತಮ್ಮಲ್ಲಿರುವ ಪ್ರತಿಭೆಗಳು ಸಮಾಜದಲ್ಲಿ ಒಬ್ಬ ಉತ್ತಮ ವ್ಯಕ್ತಿಯನ್ನಾಗಿ ರೂಪಿಸುವ ಕೆಲಸ ಮಾಡುತ್ತದೆ. ಹಾಗಾಗಿ ತಮ್ಮ ಪ್ರತಿಭೆಗಳಿಗೆ ಸೂಕ್ತ ವೇದಿಕೆಯನ್ನು ಕಲ್ಪಿಸಿಕೊಳ್ಳಬೇಕು. ವಿದ್ಯಾರ್ಥಿ ದಿಸೆೆಯಲ್ಲಿ ನಾಯಕತ್ವ ಗುಣ ಇಂದಿನ ದಿನಗಳಲ್ಲಿ ಒಬ್ಬ ಉನ್ನತ ಅಧಿಕಾರಿಯನ್ನಾಗಿ ರೂಪಿಸಲು ಸಹಕಾರಿಯಾಗಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಕೆ.ಡಿ. ನಿರ್ಮಲ ಮಾತನಾಡಿ, ಶಿಕ್ಷಣ ಕ್ಷೇತ್ರ ಸಮಗ್ರ ಚಟುವಟಿಕೆಗಳಿಂದ ಕೂಡಿರಬೇಕು. ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಎಲ್ಲಾ ರೀತಿಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತದೆ. ಅವುಗಳನ್ನು ವಿದ್ಯಾರ್ಥಿಗಳು ಗರಿಷ್ಠ ಮಟ್ಟದಲ್ಲಿ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕಿ ಡಾ. ಅನುಪಮ ಸಭಾಪತಿ, ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಎವರೆಸ್ಟ್ ರೊಡ್ರಿಗಸ್, ಸಾಂಸ್ಕೃತಿಕ ಸಂಚಾಲಕಿ ಡಾ. ಕಾವೇರಿ, ಕಾಲೇಜು ಯೂನಿಯನ್ ನಾಯಕ ನಾಯಕಿಯರು ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಸುಮಾರು ರೂ. ೧ ಕೋಟಿ ವೆಚ್ಚದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಆವರಣದಲ್ಲಿ ಶಿಥಿಲಗೊಂಡಿರುವ ಕಟ್ಟಡಗಳನ್ನು ಪರಿಶೀಲಿಸಿದರು.