ವೀರಾಜಪೇಟೆ, ನ. ೯: ಕ್ರೀಡೆಯು ಜೀವನದ ಒಂದು ಭಾಗವಾಗಿದ್ದು, ಮಾನಸಿಕ ಒತ್ತಡದ ನಿವಾರಣೆಗೆ ಅದು ಸಹಕಾರಿಯಾಗಿದೆ ಎಂದು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಕರ್ ಹೇಳಿದರು.

ವೀರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ಆಟದ ಮೈದಾನದಲ್ಲಿ ನಡೆಯುತ್ತಿರುವ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಕರ್, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ.

ನಮ್ಮ ವಿದ್ಯಾಸಂಸ್ಥೆಯು ಪದವಿಪೂರ್ವ ಕಾಲೇಜಿನ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಆಯೋಜಿಸುತ್ತಿರುವುದು ಸಂತಸ ತಂದಿದೆ ಎಂದರು. ಬಳಿಕ ಆಶಿರ್ವಚನವನ್ನು ನೀಡಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಈ ಸಂದರ್ಭ ಉಪಸ್ಥಿತರಿದ್ದ ಸಂತ ಅನ್ನಮ್ಮ ಪಿ.ಯು. ಕಾಲೇಜಿನ ಪ್ರಾಂಶುಪಾಲ ಜೋಮನ್ ಥೋಮಸ್ ಮಾತನಾಡಿ, ಪಾಠದ ಜೊತೆಗೆ ವಿದ್ಯಾರ್ಥಿಗಳಿಗೆ ಆಟವೂ ಮುಖ್ಯವಾಗಿದೆ. ಕ್ರೀಡೆಯಿಂದ ಸಮತೋಲನ ಸಾಧಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಅಂಶಗಳು ಬರಲು ಕ್ರೀಡೆ ಸಹಕಾರಿಯಾಗಿದೆ ಎಂದರು.

ಕ್ರೀಡಾಕೂಟದ ಮೊದಲ ದಿನ ಬಾಸ್ಕೆಟ್ ಬಾಲ್ ಹಾಗೂ ಹ್ಯಾಂಡ್ ಬಾಲ್ ಪಂದ್ಯವನ್ನು ಆಯೋಜಿಸಲಾಗಿತ್ತು. ಈ ಸಂದರ್ಭ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಿ.ವಿ. ರಾಜರೈ, ವೀರಾಜಪೇಟೆ ತಾಲೂಕಿನ ಎಲ್ಲ ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಒಟ್ಟು ೧೦ ತಂಡಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿವೆ. ಜಿಲ್ಲಾ ಮಟ್ಟದ ಕ್ರೀಡಾಕೂಟವು ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿಯೇ ನಡೆಯಲಿದೆ.