ಸೋಮವಾರಪೇಟೆ, ನ. ೧೮: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ತಾ. ೨೩ ರಂದು ಸ್ಥಳೀಯ ಮಹಿಳಾ ಸಮಾಜದಲ್ಲಿ ಮಧ್ಯಾಹ್ನ ೨.೩೦ಕ್ಕೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಸಾಪ ಅಧ್ಯಕ್ಷ ಎಸ್.ಡಿ. ವಿಜೇತ್ ತಿಳಿಸಿದ್ದಾರೆ.

ಶಾಸಕ ಅಪ್ಪಚ್ಚು ರಂಜನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಮಾಜಿ ಸಚಿವ ಬಿ.ಎ. ಜೀವಿಜಯ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ತಾಲೂಕು ತಹಶೀಲ್ದಾರ್ ಎಸ್.ಎನ್. ನರಗುಂದ್, ಪೊಲೀಸ್ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ.

ಮುಖ್ಯ ಭಾಷಣಕಾರರಾಗಿ ಮಡಿಕೇರಿಯ ಪ್ರಾಧ್ಯಾಪಕಿ ಡಾ. ಕಾವೇರಿ ಪ್ರಕಾಶ್ ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಶನಿವಾರಸಂತೆಯ ಡಿ. ಸುಜಾಲಾದೇವಿ, ಪೊಲೀಸ್ ವೃತ್ತ ನಿರೀಕ್ಷಕ ಪರಶಿವಮೂರ್ತಿ, ವೈದ್ಯ ಡಾ. ಸತೀಶ್, ಶಾಂತಳ್ಳಿಯ ಕೃಷಿಕ ಕೆ.ಕೆ. ಮುತ್ತಣ್ಣ, ಕವಿಗಳಾದ ನ.ಲ. ವಿಜಯ ಅವರುಗಳನ್ನು ಸನ್ಮಾನಿಸಲಾಗುವುದು.

ಎಸ್.ಎಸ್.ಎಲ್.ಸಿ. ಕನ್ನಡ ಭಾಷಾ ವಿಷಯದಲ್ಲಿ ೧೨೫ಕ್ಕೆ ೧೨೫ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಬೋಧನೆ ಮಾಡಿದ ಶಿಕ್ಷಕರುಗಳಿಗೆ ಸನ್ಮಾನ ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಬಹುಮಾನ ವಿತರಣೆ ಮಾಡಲಾಗುವುದು ಎಂದು ಎಸ್.ಡಿ. ವಿಜೇತ್ ತಿಳಿಸಿದ್ದಾರೆ.