ಕೂಡಿಗೆ, ನ. ೨೦: ತೊರೆನೂರು ಮತ್ತು ಮುಳ್ಳುಸೋಗೆ ಸೇರಿದಂತೆ ವಿವಿಧ ಶಾಲಾ ಆವರಣದಲ್ಲಿ ನೂತನ ವಿವೇಕ ಶಾಲಾ ಕಟ್ಟಡಕ್ಕೆ ಶಾಸಕ ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿದರು.
ರಾಜ್ಯ ಸರಕಾರವು ೮,೧೦೦ ಶಾಲಾ ಕೊಠಡಿಗಳನ್ನು ಕಟ್ಟಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಕ ಅನುದಾನವನ್ನು ಬಿಡುಗಡೆ ಮಾಡಿದೆ. ಅದೇ ರೀತಿಯಲ್ಲಿ ಮಡಿಕೇರಿ ಕ್ಷೇತ್ರಕ್ಕೆ ೪ ಕೋಟಿ ಹಣವನ್ನು ಶಿಕ್ಷಣ ಇಲಾಖೆಯ ಮೂಲಕ ಬಿಡುಗಡೆ ಮಾಡಲಾಗಿದೆ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಸುಸಜ್ಜಿತ ಶಾಲಾ ಕಟ್ಟಡವನ್ನು ನಿರ್ಮಾಣ ಮಾಡುವುದರ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ವಿದ್ಯಾರ್ಥಿಗಳು ಪ್ರಾಥಮಿಕ ಹಂತದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದು ಉನ್ನತ ಶಿಕ್ಷಣದತ್ತ ಮುನ್ನುಗ್ಗಬೇಕು ಎಂದರು.
ಈ ಸಂದರ್ಭ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜೈವರ್ಧನ್, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಲುವರಾಜ್, ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಮಹೇಶ್, ಉಪಾಧ್ಯಕ್ಷ ಭಾಸ್ಕರ್ ನಾಯಕ್, ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ ವೇದಮೂರ್ತಿ, ತಾಲೂಕು ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಕುಶಾಲನಗರ ಮೂಡ ಸಮಿತಿಯ ಸದಸ್ಯ ವೈಶಾಕ್, ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸದಸ್ಯರು, ವಿವಿಧ ಸಂಘಟನೆಯ ಅಧ್ಯಕ್ಷರು, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ವಿದ್ಯಾರ್ಥಿಗಳು ಹಾಜರಿದ್ದರು.