ಮಡಿಕೇರಿ, ನ. ೨೬: ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅಸಂಘಟಿತ ಕಾರ್ಮಿಕರ ಮಕ್ಕಳಿಗೆ ಕಾರ್ಮಿಕ ಇಲಾಖೆಯಿಂದ ನೀಡಲಾಗುವ ಶಾಲಾ ಕಿಟ್‌ನ್ನು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ರಾಜ್ಯ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ ಅವರು ತಮ್ಮ ಕಚೇರಿಯಲ್ಲಿ ಹಾಗೂ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಶುಕ್ರವಾರ ವಿತರಿಸಿದರು.

ಬಳಿಕ ಮಾತನಾಡಿದ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ಅವರು ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಶಾಲಾ ಕಿಟ್‌ಗಳನ್ನು ವಿತರಿಸಲಾಗಿದೆ. ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಒಳ್ಳೆಯ ವಿದ್ಯಾಭ್ಯಾಸ ಪಡೆದು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಬೇಕು ಎಂದು ತಿಳಿಸಿದರು.

ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಸರ್ಕಾರ ಬಡ ಮಕ್ಕಳ ಶ್ರೇಯೋಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಉನ್ನತ ಶಿಕ್ಷಣ ಪಡೆಯುವಂತಾಗಬೇಕು ಎಂದು ಹೇಳಿದರು. ತಾಲೂಕು ಕಾರ್ಮಿಕ ಅಧಿಕಾರಿ ಎಂ.ಎA. ಯತ್ನಟ್ಟಿ ಅವರು ಜಿಲ್ಲೆಯಲ್ಲಿ ೧ ರಿಂದ ೫ನೇ ತರಗತಿಯ ೫೦೦ ಮಕ್ಕಳಿಗೆ ಶಾಲಾ ಕಿಟ್ ವಿತರಣೆಗೆ ಅವಕಾಶವಿದ್ದು, ಮಡಿಕೇರಿ ತಾಲೂಕಿಗೆ ೧೬೬, ಸೋಮವಾರಪೇಟೆ ತಾಲೂಕಿಗೆ ೧೬೬ ಮತ್ತು ವೀರಾಜಪೇಟೆ ತಾಲೂಕಿಗೆ ೧೬೮ ಒಟ್ಟು ೫೦೦ ಶಾಲಾ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ನಗರಸಭೆ ಸದಸ್ಯರು ಇತರರು ಇದ್ದರು.