ಮಡಿಕೇರಿ, ನ. ೩೦: ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವತಿಯಿಂದ ದೇಸಿಯ ಕ್ರೀಡೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗಾಗಿ ಮತ್ತು ಶಾಲಾ ಮಕ್ಕಳಿಗಾಗಿ ಗ್ರಾಮೀಣ ಕ್ರೀಡಾಕೂಟವನ್ನು ಕಕ್ಕಬೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಯಿತು.
ಉದ್ಘಾಟನೆಯನ್ನು ಪಂಚಾಯಿತಿ ಅಧ್ಯಕ್ಷ ಸಂಪನ್ ಅಯ್ಯಪ್ಪ ನೆರವೇರಿಸಿದರು. ಸಾರ್ವಜನಿಕರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪುರುಷರ ವಿಭಾಗದಲ್ಲಿ ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂದೋಡ ಗ್ರಾಮದವರು ಪ್ರಥಮ ಸ್ಥಾನವನ್ನು ಪಡೆದುಕೊಂಡರೆ ಕುಂಜಿಲ ಗ್ರಾಮದವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡರು.
ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಮಹಿಳೆಯ ವಿಭಾಗದಲ್ಲಿ ಮರಂದೋಡ ಗ್ರಾಮದವರು ಪ್ರಥಮ ಸ್ಥಾನವನ್ನು ಪಡೆದುಕೊಂಡರು ಮತ್ತು ಕುಂಜಿಲ ಗ್ರಾಮದವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು
ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂದೋಡ, ಯವಕಪಾಡಿ, ಕುಂಜಿಲ, ನಾಲಡಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಉಪಾಧ್ಯಕ್ಷರು, ಸರ್ವ ಸದಸ್ಯರು, ವಿವಿಧ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.