ಮುಳ್ಳೂರು, ನ. ೩೦: ಸಮೀಪದ ನಿಡ್ತ ಗ್ರಾ.ಪಂ. ವತಿಯಿಂದ ನಿಡ್ತ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗ್ರಾಮೀಣ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಯಿತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ನಿಡ್ತ ಗ್ರಾ.ಪಂ. ಅಧ್ಯಕ್ಷೆ ಯಶೋಧ ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪ್ರತಿಮಾ ದಿನದ ಮಹತ್ವ ಕುರಿತು ಮಾಹಿತಿ ನೀಡಿ, ನಶಿಸುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರತಿ ಗ್ರಾ.ಪಂ. ಮಟ್ಟದಲ್ಲಿ ಸಾರ್ವಜನಿ ಕರಿಗೆ, ಸ್ಥಳೀಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಲು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ನಮ್ಮ ಗ್ರಾ.ಪಂ. ಮತ್ತು ಪ್ರಾಥಮಿಕ ಶಾಲೆಯ ಸಹಕಾರದಿಂದ ದೇಶಿಯ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಶನಿವಾರಸAತೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಸಿ.ಕೆ. ದಿನೇಶ್ ಮಾತನಾಡಿ, ನಮ್ಮ ಗ್ರಾಮೀಣ ಪ್ರದೇಶದ ದೇಶಿಯ ಕ್ರೀಡೆಗಳು ನಶಿಸುತ್ತಿರುವ ಜೊತೆಯಲ್ಲಿ ಗ್ರಾಮೀಣ ಕ್ರೀಡಾ ಪ್ರತಿಭೆಗಳು ಸಹ ಮರೆಯಾಗುತ್ತಿರುವ ಕಾಲಘಟ್ಟದಲ್ಲಿ ಸರಕಾರ ಗ್ರಾಮೀಣ ಕ್ರೀಡೆಗಳಾದ ಕಬ್ಬಡಿ, ವಾಲಿಬಾಲ್, ಎತ್ತಿನ ಗಾಡಿ ಓಡಿಸುವ ಮುಂತಾದ ದೇಶಿಯ ಕ್ರೀಡೆ ಮತ್ತು ಕ್ರೀಡಾ ಪ್ರತಿಭೆಗಳನ್ನು ಬೆಳೆಸುವ ಉದ್ದೇಶದಿಂದ ಸರಕಾರ ಗ್ರಾ.ಪಂ. ಮಟ್ಟದಲ್ಲಿ ಸಾರ್ವ ಜನಿಕರಿಗೆ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜನೆ ಮಾಡಿರುವುದು ಕ್ರೀಡಾ ಪ್ರತಿಭೆಗಳಿಗೆ ಉತ್ತಮ ವೇದಿಕೆ ಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಯಶೋಧ, ಗ್ರಾ.ಪಂ. ಕಾರ್ಯದರ್ಶಿ ಕುಶಾಲಪ್ಪ, ಹಂಡ್ಲಿ ಕ್ಲಸ್ಟರ್ ಸಿಆರ್‌ಪಿ ಮನೋಹರ್, ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್, ಶಿಕ್ಷಕಿ ಇಂದಿರಾ, ಪ್ರೌಢಶಾಲಾ ಶಿಕ್ಷಕ ಪ್ರಿಯಾಂಕ ಮುಂತಾದವರು ಇದ್ದರು.