ಸೋಮವಾರಪೇಟೆ, ಡಿ. ೬: ವಿಶೇಷ ಅಗತ್ಯತೆ ಇರುವ ಮಕ್ಕಳಿಗೆ ಸರಕಾರದಿಂದ ಲಭ್ಯವಿರುವ ಸೌಲಭ್ಯ ಗಳನ್ನು ಸಕಾಲದಲ್ಲಿ ತಲುಪಿಸಬೇಕು. ಸೌಲಭ್ಯಗಳ ಬಗ್ಗೆ ಮಕ್ಕಳ ಪೋಷಕರಿಗೆ ಸಮಗ್ರ ಮಾಹಿತಿ ನೀಡಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ತಾಲೂಕಿನ ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಶೇಷ ಅಗತ್ಯತೆ ಯುಳ್ಳ ಮಕ್ಕಳಿಗೆ ಆಯೋಜಿಸಲಾಗಿದ್ದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಶೇಷ ಚೇತನ ಮಕ್ಕಳನ್ನು ಸಮಾಜದಲ್ಲಿ ಪ್ರತಿಯೊಬ್ಬರೂ ಗೌರವದಿಂದ ಕಾಣುವಂತಾಗಬೇಕು. ಅಂಗವಿಕಲತೆ ಶಾಪವಲ್ಲ, ಅಂತಹ ಮಕ್ಕಳನ್ನು ಇತರೆ ಮಕ್ಕಳಂತೆ ಸರಿಸಮಾನವಾಗಿ ನೋಡಿಕೊಳ್ಳಬೇಕು. ಸರಕಾರ ಇಂತಹ ಮಕ್ಕಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದು, ಪೋಷಕರು ಇದನ್ನು ಪಡೆದುಕೊಳ್ಳಲು ಮುಂದಾಗಬೇಕೆAದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಪರಮೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ರೋಟರಿ ಸಂಸ್ಥೆ ಅಧ್ಯಕ್ಷ ಲೋಕೇಶ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪ್ರದೀಪ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.