ಕೂಡಿಗೆ, ಡಿ. ೬ : ನಂಜರಾಯಪಟ್ಟಣ ಮತ್ತು ವಿರೂಪಾಕ್ಷಪುರದ ಅರಣ್ಯ ಹಕ್ಕು ಸಮಿತಿ ಸಭೆ ಶಾಸಕ ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ನಡೆಯಿತು. ಅರಣ್ಯ ಹಕ್ಕು ಸಮಿತಿಯ ನಿಯಮಾನು ಸಾರವಾಗಿ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ಒದಗಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಭೆಯಲ್ಲಿದ್ದ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ವಿರೂಪಾಕ್ಷಪುರದಲ್ಲಿ ಈಗಾಗಲೇ ಈ ವ್ಯಾಪ್ತಿಯಲ್ಲಿ ಸರ್ವೆ ಕಾರ್ಯ ಮುಗಿದಿದ್ದು ಶೀಘ್ರದಲ್ಲೇ ಸರ್ವೆಯ ವರದಿ ಲಭಿಸಿದ ಬಳಿಕ ಮುಂದಿನ ಹಂತದ ಪ್ರಕ್ರಿಯೆ ಸುಗಮವಾಗಲಿದೆ. ಬಡ ಕೂಲಿ ಕಾರ್ಮಿಕ ಫಲಾನುಭವಿಗಳು ಸರಕಾರದ ಸೌಲಭ್ಯಗಳ ಬಗ್ಗೆ ಅರಿತುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕಿದೆ. ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯಯುವ ಜೀವನಕ್ಕೆ ಒತ್ತು ನೀಡಬೇಕು ಎಂದು ರಂಜನ್ ಹೇಳಿದರು.
ಕಾರ್ಯಕ್ರಮದಲ್ಲಿ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ ಮಾತನಾಡಿ, ಶಾಸಕರ ಕಾಳಜಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರ ಕನಸು ನನಸಾಗಲಿದೆ ಎಂದು ಧನ್ಯವಾದ ಸಲ್ಲಿಸಿದರು. ಸದಸ್ಯ ಆರ್.ಕೆ.ಚಂದ್ರ ಮಾತನಾಡಿ, ಅಪ್ಪಚ್ಚು ರಂಜನ್ ಅವರು ಅರಣ್ಯ ಹಕ್ಕು ಸಮಿತಿ ಮೂಲಕ ಫಲಾನುಭವಿಗಳ ಬಾಳಿಗೆ ನೆರವಾಗಿದ್ದಾರೆ ಎಂದರು. ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಲ್ಪಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಗ್ರವಾದ ಮಾಹಿತಿಯನ್ನು ಸಭೆಗೆ ಒದಗಿಸಿದರು.
ಸಭೆಯಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚಂದ್ರಪ್ಪ, ಉಪ ವಲಯ ಅರಣ್ಯಾಧಿಕಾರಿ ಸುಬ್ರಾಯ, ಅರಣ್ಯ ಹಕ್ಕು ಸಮಿತಿ ಅಧ್ಯಕ್ಷ ಗಿರೀಶ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸಮೀರ, ಸದಸ್ಯರಾದ ಗಿರಿಜಮ್ಮ, ಲೋಕನಾಥ್, ಕಂದಾಯಾಧಿಕಾರಿ ಸಂತೋಷ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಗ್ರಾಮದ ನೂರಾರು ಪ್ರಮುಖರು ಹಾಜರಿದ್ದರು.