ಮಡಿಕೇರಿ, ಡಿ. ೧೦: ಕೊಡಗು ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರು (ಆಡಳಿತ) ಆಗಿ ಸೇವೆ ಸಲ್ಲಿಸುತ್ತಿದ್ದು, ಮಂಡ್ಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯ ಉಪ ನಿದೇರ್ಶಕರು (ಅಭಿವೃದ್ಧಿ) ಹಾಗೂ ಪ್ರಾಂಶುಪಾಲರಾಗಿ ವರ್ಗಾವಣೆಗೊಂಡ ಡಿಡಿಪಿಐ ವೇದಮೂರ್ತಿ ಅವರಿಗೆ ಮಡಿಕೇರಿ ನಗರದ ಡಿಡಿಪಿಐ ಕಚೇರಿಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕಚೇರಿಯ ಸಿಬ್ಬಂದಿ ಹಾಗೂ ಶಿಕ್ಷಕರ ಸಂಘಟನೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಸನ್ಮಾನಿತಗೊಂಡ ಡಿಡಿಪಿಐ ವೇದಮೂರ್ತಿ ಮಾತನಾಡಿ, ವೀರ ಸೇನಾನಿಗಳ ನಾಡಿನ ಕೊಡಗಿನಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ತಾವು ಸಲ್ಲಿಸಿದ ಸೇವೆ ತೃಪ್ತಿ ತಂದಿದ್ದು, ಇದಕ್ಕೆ ಸಹಕರಿಸಿದ ಅಧಿಕಾರಿ ವರ್ಗ, ಸಿಬ್ಬಂದಿ, ಶಿಕ್ಷಕರ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದರು.

ಕೂಡಿಗೆ ಡಯಟ್ ಸಂಸ್ಥೆಯ ಉಪ ನಿರ್ದೇಶಕರೂ ಆದ ಪ್ರಾಂಶುಪಾಲ ಬಿ.ವಿ. ಮಲ್ಲೇಶಪ್ಪ ಮಾತನಾಡಿ, ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ಡಿಡಿಪಿಐ ವೇದಮೂರ್ತಿ ಅವರು ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಯಲ್ಲಿ ದಶಕಕ್ಕೂ ಹೆಚ್ಚು ಕಾಲ ವಿವಿಧ ಹಂತದ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸುವ ಮೂಲಕ ಶಿಕ್ಷಕರ ಪ್ರೀತಿಗೆ ಪಾತ್ರರಾಗಿದ್ದಾರೆ. ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕೂಡ ಉತ್ತಮ ಸೇವೆ ಸಲ್ಲಿಸಲಿ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥ್, ಶ್ರೀಶೈಲ ಬಿಳಗಿ, ಕೆ.ವಿ. ಸುರೇಶ್, ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಡಾ. ಬಿ.ಸಿ. ದೊಡ್ಡೇಗೌಡ, ಪತ್ರಾಂಕಿತ ಅಧಿಕಾರಿ ವಿನೋದ, ಜಿಲ್ಲಾ ಪ್ರಬಾರ ದೈಹಿಕ ಶಿಕ್ಷಣಾಧಿಕಾರಿ ಡಾ ಸದಾಶಿವಯ್ಯ ಎಸ್. ಪಲ್ಲೇದ್, ವಿಷಯ ಪರಿವೀಕ್ಷಕಿ ಕೆ.ಆರ್. ಬಿಂದು, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಎನ್. ಮಂಜುನಾಥ್, ಸಂಘದ ವೀರಾಜಪೇಟೆ ತಾಲೂಕು ಘಟಕದ ಅಧ್ಯಕ್ಷ ಸುರೇಂದ್ರ, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಕೆ. ಕುಮಾರ್, ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾಧ್ಯಕ್ಷ ಟಿ.ಜಿ. ಪ್ರೇಮಕುಮಾರ್, ಬಿಆರ್‌ಸಿ ಪಿ.ಕೆ. ನಳಿನಿ, ಇಸಿಓ ಎಂ.ಹೆಚ್. ಹರೀಶ್, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಸಂದೇಶ್, ಆಕಾಶ್, ಉ.ರಾ. ನಾಗೇಶ್, ಎಸ್.ಡಿ. ಪ್ರಶಾಂತ್, ಶಿಕ್ಷಕರ ಸಂಘಟನೆಯ ಪದಾಧಿಕಾರಿಗಳು, ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.