ಕೂಡಿಗೆ, ಡಿ. ೧೧: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸರಹದ್ದಿನ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊರ ರಾಜ್ಯದ ಕಾರ್ಮಿಕರ ಸಮಗ್ರವಾದ ಮಾಹಿತಿ ಮತ್ತು ಅವರ ಮೂಲ ದಾಖಲೆಗಳ ಪರಿಶೀಲನೆ ಕಾರ್ಯ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯಿತು.
ಜಿಲ್ಲೆಯಲ್ಲೇ ಪ್ರಮುಖ ಕೈಗಾರಿಕಾ ಕೇಂದ್ರವಾಗಿರುವ ಕೂಡ್ಲೂರು ಕೈಗಾರಿಕಾ ಕೇಂದ್ರದಲ್ಲಿ ೩೦ ಕ್ಕೂ ಹೆಚ್ಚು ಕೈಗಾರಿಕಾ ಘಟಕಗಳಲ್ಲಿ ನೂರಾರು ಹೊರರಾಜ್ಯದ ಕಾರ್ಮಿಕರು ಕೆಲಸ ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೂಡ್ಲೂರು, ಕೂಡಿಗೆ, ಹೆಬ್ಬಾಲೆ, ಶಿರಂಗಾಲ ಸೇರಿದಂತೆ ವಿವಿಧ ಕೈಗಾರಿಕಾ ಘಟಕಗಳ ಕೇಂದ್ರಕ್ಕೆ ತೆರಳಿ ಕೆಲಸ ನಿರ್ವಹಿಸುತ್ತಿರುವವರ ಸಂಖ್ಯೆ, ಅವರ ಆಧಾರ ಕಾರ್ಡ್ ಮತ್ತು ಗುರುತಿನ ಚೀಟಿ ಪರಿಶೀಲನೆ ನಡೆಸಿ ಲಿಖಿತ ನೋಂದಣಿ ಮಾಡಲಾಯಿತು. ಈ ಸಂದರ್ಭದಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್, ಅಪರಾಧü ವಿಭಾಗದ ಠಾಣಾಧಿಕಾರಿ ಭಾರತಿ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.