ಗೋಣಿಕೊಪ್ಪಲು, ಡಿ. ೧೬: ಪಟ್ಟಣದ ಕಿತ್ತಳೆ ಬೆಳೆಗಾರರ ಸಂಘದ ಸಭಾಂಗಣದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‌ನ ಪದಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಮುಂದಿನ ಚುನಾವಣೆಯು ಯಾವುದೇ ಸಂದರ್ಭದಲ್ಲಿ ಘೋಷಣೆ ಆಗಬಹುದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಬೇಕು. ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸಬೇಕು ಪ್ರಮುಖವಾಗಿ ಮತದಾರರ ಚೀಟಿಯಿಂದ ವಂಚಿತರಾಗಿರುವ ಮತದಾರರನ್ನು ಸೇರಿಸುವಲ್ಲಿ ಬೂತ್‌ಮಟ್ಟದ ಕಾರ್ಯಕರ್ತರು ಕೆಲಸ ನಿರ್ವಹಿಸಬೇಕು. ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಉತ್ತಮವಾಗಿದ್ದು ಜವಾಬ್ದಾರಿ ವಹಿಸಿದ ಪದಾಧಿಕಾರಿಗಳು ಸಮಿತಿಯು ನೀಡುವ ಸೂಚನೆಗಳನ್ನು ಪಾಲಿಸಬೇಕು. ಸಂಘಟನೆ ಮತ್ತಷ್ಟು ಬಲಿಷ್ಟಗೊಳಿಸಲು ಪಕ್ಷವು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಸಕ್ರಿಯವಾಗಿ ಕಾರ್ಯಕರ್ತರೊಂದಿಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಮಾತನಾಡಿ, ಜಿಲ್ಲೆಯ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಆಶಾದಾಯಕ ಬೆಳವಣಿಗೆ ಕಂಡು ಬರುತ್ತಿದೆ. ಆಂತರಿಕ ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿ ಮುಖಂಡರು ಬಗೆಹರಿಸಲಿದ್ದಾರೆ. ಪಕ್ಷವು ಯಾರಿಗೆ ಟಿಕೆಟ್ ನೀಡಿದರೂ ಒಗ್ಗಟ್ಟಾಗಿ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸುವಂತೆ ಕರೆ ನೀಡಿದರು.

ಕೊಡಗು ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಜನವರಿ ತಿಂಗಳಿನಲ್ಲಿ ಅಭ್ಯರ್ಥಿಯನ್ನು ಪಕ್ಷವು ಅಧಿಕೃತವಾಗಿ ಘೋಷಿಸಲಿದೆ. ಯಾವುದೇ ಊಹಪೋಹಗಳಿಗೆ ಕಾರ್ಯಕರ್ತರು ಕಿವಿಗೊಡಬಾರದು. ಪಕ್ಷದ ತೀರ್ಮಾನಕ್ಕೆ ಎಲ್ಲರು ಬದ್ದರಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಕಾಂಗ್ರೆಸ್ ಮಾಜಿ ಅಧ್ಯಕ್ಷ ಪೆಮ್ಮಂಡ ಕೆ. ಪೊನ್ನಪ್ಪ, ಕಾಂಗ್ರೆಸ್ ಹಿರಿಯ ಮುಖಂಡರಾದ ಪಿ.ಕೆ. ಪ್ರವೀಣ್, ಅಬ್ದುಲ್ ಸಮ್ಮದ್ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಕೋಳೇರ ಭಾರತಿ, ಜಿ.ಪಂ. ಮಾಜಿ ಸದಸ್ಯ ಮೂಕಳೇರ ಕುಶಾಲಪ್ಪ, ಯುವ ಕಾಂಗ್ರೆಸ್‌ನ ಅಧ್ಯಕ್ಷ ನಾಮೇರ ಅಂಕಿತ್, ಹಿಂದುಳಿದ ವರ್ಗಗಳ ಅಧ್ಯಕ್ಷ ಶರತ್‌ಕಾಂತ್, ಎಸ್.ಟಿ. ಘಟಕದ ಅಧ್ಯಕ್ಷ ಮಣಿಕುಂಞ ಸೇರಿದಂತೆ ಪ್ರಮುಖರು ಹಾಜರಿದ್ದರು.