ಮಡಿಕೇರಿ, ಡಿ. ೧೭: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕೀಳು ಪದ ಬಳಕೆ ಮಾಡಿದ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಹಾಗೂ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ಪರವಾಗಿ ಹೇಳಿಕೆ ನೀಡಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಜಿಲ್ಲಾ ಬಿಜೆಪಿ ನಗರದ ಜಿ.ಟಿ. ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡುವ ವೇಳೆ ಬಿಲಾವಲ್ ಭುಟ್ಟೊ ‘ಒಸಮಾ ಬಿನ್ ಲಾಡೆನ್ ಸತ್ತಿದ್ದಾನೆ, ಆದರೆ ಗುಜರಾತ್‌ನ ಹಂತಕ ಇನ್ನೂ ಜೀವಂತವಾಗಿದ್ದಾನೆ, ಭಾರತದ ಪ್ರಧಾನಿಯಾಗಿದ್ದಾನೆ’ ಎಂದು ಹೇಳಿಕೆ ನೀಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ‘ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಸಣ್ಣ ವಿಷಯವಾಗಿದ್ದು, ಬಿಜೆಪಿ ಅದನ್ನು ದೊಡ್ಡದು ಮಾಡುತ್ತಿದೆ’ ಎಂದು ಹೇಳಿ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ ಈ ಎರಡು ಹೇಳಿಕೆಗಳನ್ನು ಖಂಡಿಸಿ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಹಾಗೂ ಪಾಕಿಸ್ತಾನದ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಸುಜಾಕುಶಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ದಕ್ಷಿಣಕನ್ನಡ ಉಸ್ತುವಾರಿ ಭಾರತೀಶ್ ಇವರುಗಳು ಪಾಕಿಸ್ತಾನದ ವಿದೇಶಾಂಗ ಸಚಿವರು ಹಾಗೂ ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗಳು ಖಂಡನೀಯವಾಗಿದ್ದು, ಇಂತಹ ಹೇಳಿಕೆಗಳನ್ನು ನೀಡುವ ಛಾಳಿಯನ್ನು ಮುಂದುವರಿಸಿದರೆ, ಬಿಜೆಪಿ ಹಾಗೂ ದೇಶದ ನಾಗರಿಕರು ಅದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ಪಕ್ಷದ ವಕ್ತಾರ ಮಹೇಶ್ ಜೈನಿ, ಯುವಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ, ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಮತ್ತಿತರರು ಪಾಲ್ಗೊಂಡಿದ್ದರು.