ಬೆಳಗಾವಿ, ಡಿ. 22: ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಾಣು ಕಂಡುಬಂದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಐ.ಎಲ್.ಐ. ಮತ್ತು ಎಸ್.ಎ.ಆರ್.ಐ. ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ, ಕೋವಿಡ್ ನಿರ್ವಹಣೆ ಕುರಿತ ಸಭೆ ಬಳಿಕ ಮಾತನಾಡಿದ ಸಚಿವರು, ಚೀನಾ ಸೇರಿದಂತೆ ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ. ಈಗಾಗಲೇ 2-3 ಸಾವಿರ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಇದರ ಜೊತೆಗೆ, ರಾಜ್ಯದಲ್ಲಿ ಐಎಲ್‍ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಒಳಾಂಗಣ ಸ್ಥಳ, ಎಸಿ ಇರುವ ಕಡೆಗಳಲ್ಲಿ ಮಾಸ್ಕ್ ಧರಿಸಬೇಕು ಎಂದು ಸೂಚನೆ ನೀಡಲಾಗುವುದು. ವಿದೇಶದಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬರುವ ಪ್ರಯಾಣಿಕರಿಗೆ ಪರೀಕ್ಷೆ ಮಾಡಲು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. ಈಗಾಗಲೇ ವಿಮಾನ ನಿಲ್ದಾಣದಲ್ಲಿ ಕೆಲವರಿಗೆ ಪರೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಅನೇಕ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕಗಳನ್ನು ಅಳವಡಿಸಲಾಗಿದೆ. ಇವುಗಳು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಸಿದ್ಧತೆ ಕೈಗೊಳ್ಳಲು ಸೂಚಿಸಲಾಗುವುದು. ಜಿಲ್ಲಾಸ್ಪತ್ರೆಗಳಲ್ಲಿ ಕೆಲ ಹಾಸಿಗೆಗಳನ್ನು ಕೋವಿಡ್‍ಗೆ ಮೀಸಲಿಡಲು ತೀರ್ಮಾನವಾಗಿದೆ. ಖಾಸಗಿ ಆಸ್ಪತ್ರೆಯಲ್ಲೂ (ಮೊದಲ ಪುಟದಿಂದ) ಹಾಸಿಗೆ ಮೀಸಲಿಡಲು ಸೂಚಿಸಲಾಗುವುದು, ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಭೆ ನಡೆಯುತ್ತಿದ್ದು, ಅಲ್ಲಿಂದ ನೀಡುವ ಮಾರ್ಗಸೂಚಿಯನ್ನು ನೋಡಿಕೊಂಡು ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದರು.
3ನೇ ಡೋಸ್: ಕೋವಿಡ್ ಪ್ರಕರಣ ಕಡಿಮೆಯಾದ ಹಿನ್ನೆಲೆಯಲ್ಲಿ, ಜನರು ಮೂರನೇ ಡೋಸ್‍ನ ಲಸಿಕೆ ಪಡೆಯಲು ಆಸಕ್ತಿ ತೋರುತ್ತಿಲ್ಲ. ಇದರಿಂದಾಗಿ 3ನೇ ಡೋಸ್ ಲಸಿಕಾಕರಣದಲ್ಲಿ ಶೇ.20 ರಷ್ಟು ಮಾತ್ರ ಪ್ರಗತಿಯಾಗಿದೆ. ಇದಕ್ಕಾಗಿ ಎಲ್ಲಾ ತಾಲೂಕುಗಳಲ್ಲಿ ವಿಶೇಷ ಲಸಿಕಾ ಶಿಬಿರ ಏರ್ಪಡಿಸಿ, 3ನೇ ಡೋಸ್‍ನಲ್ಲೂ ಶೇ. 100 ರಷ್ಟು ಗುರಿ ತಲುಪಲು ಸೂಚಿಸಲಾಗಿದೆ. ಇದಕ್ಕೆ ಪೂರಕವಾಗಿ ಲಸಿಕೆಯನ್ನು ಸಂಗ್ರಹಿಸಿಡಲು ಸೂಚಿಸಲಾಗುವುದು ಎಂದು ವಿವರಿಸಿದರು.
ಜನರು ಆದಷ್ಟು ಬೇಗ ಮೂರನೇ ಡೋಸ್ ಪಡೆಯಬೇಕು. ಪರವಾಗಿಲ್ಲ ಎಂಬ ಉದಾಸೀನತೆ ಬಿಡಬೇಕು. ಮೂರನೇ ಡೋಸ್ ಪಡೆದರೆ ಅಡ್ಡ ಪರಿಣಾಮ ಇದೆಯೇ ಎಂಬುದು ಸದನದಲ್ಲೂ ಕೇಳಿಬಂತು. ಇಂತಹ ಅಂತೆಕಂತೆ ಮಾತುಗಳನ್ನು ಯಾರೂ ಕೇಳಬಾರದು. ಲಸಿಕೆಯಿಂದ ಅಪಾಯವಾಗುತ್ತದೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ದಾಖಲೆ ಇಲ್ಲ. ಲಸಿಕೆ ಪಡೆದು ನಮ್ಮನ್ನು ನಾವು ಕೋವಿಡ್‍ನಿಂದ ರಕ್ಷಿಸಿಕೊಳ್ಳಬಹುದು. ಹಾಗೆಯೇ ಮಾಸ್ಕ್ ಕೂಡ ಧರಿಸಬೇಕು. ರೂಪಾಂತರಿ ವೈರಾಣು ಯಾವುದೇ ಪರಿಣಾಮ ಬೀರದಂತೆ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಸಚಿವರು ಕೋರಿದರು.
ಆರೋಗ್ಯ ಇಲಾಖೆ ಮುಂಜಾಗ್ರತೆ
ಮತ್ತೊಮ್ಮೆ ಕೋವಿಡ್‍ನ ರೂಪಾಂತರ ತಳಿಯ ಆತಂಕ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ಮುಂಜಾಗ್ರತೆಯತ್ತ ಕ್ರಮವಹಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಅವರು ತಿಳಿಸಿದ್ದಾರೆ.
ಸದ್ಯದಮಟ್ಟಿಗೆ ಈ ಬಗ್ಗೆ ಕೇಂದ್ರದಿಂದಾಗಲಿ ಅಥವಾ ರಾಜ್ಯದಿಂದಾಗಲಿ ಯಾವುದೇ ಮಾರ್ಗಸೂಚಿ ಬಂದಿಲ್ಲ. ಆದರೂ ಜಿಲ್ಲೆಯಲ್ಲಿ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವತ್ತ ಗಮನ ಹರಿಸಲಾಗುವುದು. ಆಕ್ಸಿಜನ್‍ಬೆಡ್, ಆಕ್ಸಿಜನ್ ನಂತಹ ವ್ಯವಸ್ಥೆ ಸದ್ಯಕ್ಕೆ ಇದೆ ಎಂದು ಅವರು ತಿಳಿಸಿದರು.
ಈ ಸೋಂಕಿನ ಬಗ್ಗೆ ಜನರು ಎಚ್ಚರ ವಹಿಸಬೇಕಿದೆ. ಇದರ ಗುರುತು ಮೊದಲೇ ತಿಳಿಯುವುದು ಕಷ್ಟ ಎನ್ನಲಾಗುತ್ತಿದೆ. ಕತ್ತು ನೋವು, ಕೈಕಾಲು, ಮೈನೋವು, ಉಸಿರಾಟದ ತೊಂದರೆ ಎದುರಾದಲ್ಲಿ ಈ ಹಿಂದಿನಂತೆ ಪರೀಕ್ಷೆ ಮಾಡಿಸಿಕೊಳ್ಳುವತ್ತ ಎಚ್ಚರ ವಹಿಸಬೇಕು. ಸಾರ್ವಜನಿಕರು ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು, ಸ್ವಚ್ಛವಾಗಿ ಕೈ ತೊಳೆಯುವತ್ತ ನಿಗಾವಹಿಸಬೇಕೆಂದು ಆರೋಗ್ಯಾಧಿಕಾರಿಗಳು ಸಲಹೆ ನೀಡಿದ್ದಾರೆ.
ಈ ಸಂಬಂಧ ಯಾವುದೇ ಮಾರ್ಗಸೂಚಿ ಬಂದಿಲ್ಲವಾದರೂ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿರುವುದಾಗಿ ವೈದ್ಯಕೀಯ ಕಾಲೇಜಿನ ಡೀನ್ ಕಳ್ಳಿಚಂಡ ಕಾರ್ಯಪ್ಪ ತಿಳಿಸಿದ್ದಾರೆ.