ಸೋಮವಾರಪೇಟೆ, ಡಿ. ೨೫: ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ರೈತರೇ ನಿಜವಾದ ಕೃಷಿ ವಿಜ್ಞಾನಿಗಳು. ಸಮಗ್ರ ಕೃಷಿ ಹೊಂದಿರುವ ಕೊಡಗು ವಿಶಿಷ್ಟವಾದ ಕೃಷಿ ವಿದ್ಯಾಲಯವಾಗಿದೆ ಎಂದು ಸೋಮವಾರಪೇಟೆ ತಾಲೂಕು ಕೃಷಿ ಇಲಾಖಾ ಸಹಾಯಕ ನಿರ್ದೇಶಕ ಯಾದವ್ ಬಾಬು ಅಭಿಪ್ರಾಯಿಸಿದರು.

ಜಿಲ್ಲಾ ಪಂಚಾಯಿತಿ, ತಾಲೂಕು ಕೃಷಿ ಇಲಾಖೆ, ಕೃಷಿಕ ಸಮಾಜ, ಆತ್ಮ ಯೋಜನೆಯಡಿ ಇಲ್ಲಿನ ಚೌಡ್ಲು ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ಆಯೋಜಿಸಿದ್ದ ರೈತ ದಿನಾಚರಣೆ-ಕಿಸಾನ್ ಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೈತನಿಂದಾಗಿ ಇಂದು ದೇಶ ಉಳಿದಿದೆ. ರೈತರ ಸ್ಮರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಎಂದ ಅವರು, ಕೊಡಗು ಜಿಲ್ಲೆಯಲ್ಲಿ ಬಹುತೇಕ ರೈತರು ಮಿಶ್ರ ಬೆಳೆಯನ್ನು ಬೆಳೆಯುತ್ತಿದ್ದಾರೆ. ಕಾಫಿ, ಏಲಕ್ಕಿ, ಕರಿಮೆಣಸು, ಭತ್ತದೊಂದಿಗೆ ಇತರ ಬೆಳೆಗಳನ್ನು ಬೆಳೆಯುತ್ತಿದ್ದು ಎಲ್ಲಾ ಮಾದರಿಯ ಕೃಷಿಯ ಬಗ್ಗೆಯೂ ಮಾಹಿತಿ ಹೊಂದಿದ್ದಾರೆ. ಆದರೆ ಪ್ರಾಕೃತಿಕ ವಿಕೋಪಗಳು ಇಲ್ಲಿನ ರೈತರನ್ನು ಕೆಲವೊಮ್ಮೆ ಸಂಕಷ್ಟಕ್ಕೆ ಸಿಲುಕಿಸುತ್ತಿವೆ ಎಂದು ಅಭಿಪ್ರಾಯಿಸಿದರು.

ರೈತರು ಬೆಳೆದ ಬೆಳೆಗಳನ್ನು ನೇರವಾಗಿ ಮಾರಾಟ ಮಾಡುವ ಸಂದರ್ಭ ಗ್ರಾಹಕರಾಗಿ ನಾವುಗಳು ಚೌಕಾಸಿ ಮಾಡಬಾರದು. ರೈತರ ಶ್ರಮಕ್ಕೆ ಬೆಲೆ ನೀಡಬೇಕು ಎಂದ ಅವರು, ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡಿಕೊಂಡು ಅಧಿಕ ಇಳುವರಿ ಪಡೆಯುವ ಬಗ್ಗೆ ಚಿಂತನೆ ಹರಿಸಬೇಕು. ಸಾವಯವ ಕೃಷಿಗೆ ಉತ್ತೇಜನ ನೀಡಬೇಕು ಎಂದರು.

ಕೇAದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಅಭ್ಯುದಯಕ್ಕಾಗಿ, ಕೃಷಿಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಕಿಸಾನ್ ಸಮ್ಮಾನ್ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದ ಅವರು, ಕೃಷಿ ಇಲಾಖೆಯಿಂದ ರೈತರಿಗೆ ತುಂತುರು ನೀರಾವರಿ ಘಟಕ, ರೋಟಾವೇಟರ್, ಟಿಲ್ಲರ್, ಪಂಪ್‌ಸೆಟ್, ಕೃಷಿ ಹೊಂಡ, ಎರೆಹುಳು ತೊಟ್ಟಿ ನಿರ್ಮಾಣ ಸೇರಿದಂತೆ ಅನೇಕ ಯೋಜನೆಗಳಿಗೆ ಸಹಾಯಧನ ಲಭ್ಯವಿದ್ದು, ಇವುಗಳ ಪ್ರಯೋಜನ ಪಡೆಯಬೇಕು ಎಂದು ಕರೆ ನೀಡಿದರು.

ಇದರೊಂದಿಗೆ ಮುಖ್ಯಮಂತ್ರಿಗಳು ನೂತನವಾಗಿ ಜಾರಿಗೆ ತಂದಿರುವ ರೈತ ವಿದ್ಯಾನಿಧಿ ಯೋಜನೆಯಡಿ ರೈತರ ಮಕ್ಕಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಯಾದವ್ ಬಾಬು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಸ್.ಪಿ. ಪೊನ್ನಪ್ಪ ವಹಿಸಿದ್ದರು. ವೇದಿಕೆಯಲ್ಲಿ ಚೌಡ್ಲು ವಿಎಸ್‌ಎಸ್‌ಎನ್ ಅಧ್ಯಕ್ಷ ಕೆ.ಟಿ. ಪರಮೇಶ್, ಕೃಷಿಕ ಸಮಾಜದ ಉಪಾಧ್ಯಕ್ಷ ಎಂ.ಆರ್. ಗೋವಿಂದರಾಜು, ಹಾನಗಲ್ಲು ಗ್ರಾ.ಪಂ. ಸದಸ್ಯ ಡಿ.ಎಸ್. ರಘು ಸೇರಿದಂತೆ ಇತರರು ಉಪಸ್ಥಿತರಿದ್ದರು. ಕೃಷಿ ಅಧಿಕಾರಿ ನವ್ಯ ನಾಣಯ್ಯ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು, ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.