ಸೋಮವಾರಪೇಟೆ, ಜ. ೧: ಕಾಯಕಯೋಗಿ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ಆಶ್ರಯದಲ್ಲಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಶಾಸಕರ ನಿಧಿಯಡಿ ಪಟ್ಟಣದ ಆನೆಕೆರೆ ಸಮೀಪ ರೂ. ೮ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಶ್ರೀ ಶಿವಕುಮಾರ ಸ್ವಾಮೀಜಿ ಬಸ್ ತಂಗುದಾಣದ ಉದ್ಘಾಟನೆ ಹಾಗೂ ಗುರುವಂದನಾ ಕಾರ್ಯಕ್ರಮ ತಾ. ೯ ರಂದು ನಡೆಯಲಿದೆ.

ಸಾರ್ವಜನಿಕ ಪ್ರಯಾಣಿಕರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಸ್ಮರಣೆಗೋಸ್ಕರ, ಸಮಿತಿಯ ಉಸ್ತುವಾರಿಯಲ್ಲಿ ನೂತನವಾಗಿ ಬಸ್ ತಂಗುದಾಣವನ್ನು ನಿರ್ಮಿಸಿದ್ದು, ತಾ. ೯ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಸಮಿತಿಯ ಅಧ್ಯಕ್ಷ ಎಸ್. ಮಹೇಶ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ತುಮಕೂರು ಸಿದ್ಧಗಂಗಾ ಮಠದ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಅರಮೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕನ್ನಡ ಮಠದ ಚನ್ನಬಸವ ದೇಶೀಕೇಂದ್ರ ಸ್ವಾಮೀಜಿ, ಕಲ್ಲುಮಠದ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ತೋಂಟದಾರ್ಯ ಮಠದ ಬಸವಲಿಂಗ ಸ್ವಾಮೀಜಿ, ವಿರಕ್ತ ಮಠದ ಮಲ್ಲೇಶ ಸ್ವಾಮೀಜಿ, ಮನೆಹಳ್ಳಿ ಮಠದ ಮಹಾಂತ ಶಿವಲಿಂಗ ಸ್ವಾಮೀಜಿ ಸೇರಿದಂತೆ ಇತರ ಮಠಾಧೀಶರು ಭಾಗವಹಿಸಲಿದ್ದಾರೆ.

ಗುರುವಂದನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ವಹಿಸಲಿದ್ದು, ಉಸ್ತುವಾರಿ ಸಚಿವ ನಾಗೇಶ್ ಅವರು ಉದ್ಘಾಟಿಸಲಿದ್ದಾರೆ.

ಸಂಸದ ಪ್ರತಾಪ್ ಸಿಂಹ, ಶಾಸಕರಾದ ಕೆ.ಜಿ. ಬೋಪಯ್ಯ, ಸುಜಾ ಕುಶಾಲಪ್ಪ, ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು, ಉಪಾಧ್ಯಕ್ಷ ಸಂಜೀವ, ಧರ್ಮಸ್ಥಳ ಸಂಘದ ಯೋಜನಾಧಿಕಾರಿ ರೋಹಿತ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಮಹೇಶ್ ತಿಳಿಸಿದ್ದಾರೆ.