ಮಡಿಕೇರಿ, ಜ.೯: ಕೇಂದ್ರ ಸರ್ಕಾರದ ಆದೇಶದಂತೆ ೨೦೨೨-೨೩ ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಮಾಡಲಾಗುತ್ತಿದ್ದು, ತಾ. ೧೫ ರಿಂದ ನೋಂದಣಿ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ೨೦೨೨-೨೩ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆಯ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯನ್ನಾಗಿ ಸರಕಾರ ನೇಮಕ ಮಾಡಿದ್ದು, ಖರೀದಿ ಪ್ರಕ್ರಿಯೆ ನಡೆಯುತ್ತಿದೆ.

ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ತಾ.೧೫ ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಿದ್ದು, ಕೆಲವೇ ದಿನಗಳಲ್ಲಿ ಭತ್ತ/ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಪ್ರತಿ ಎಕರೆಗೆ ೨೫ ಕ್ವಿಂಟಾಲ್ ನಂತೆ ಒಬ್ಬ ಬೆಳೆಗಾರರಿಂದ ಗರಿಷ್ಠ ೪೦ ಕ್ವಿಂಟಾಲ್ ಭತ್ತ ಹಾಗೂ ರಾಗಿ ಕನಿಷ್ಟ ೧೦ ರಿಂದ ಗರಿಷ್ಠ ೨೦ ಕ್ವಿಂಟಾಲ್ ಖರೀದಿಸಲಾಗುತ್ತಿದೆ. ೨೦೨೩ ರ ಜನವರಿ ೯ (ದಿನಾಂಕ ೦೯-೦೧-೨೦೨೩ ರಂತೆ) ಜಿಲ್ಲೆಯಲ್ಲಿ ಒಟ್ಟು ೩೫೮ ರೈತರು, ಅಂದಾಜು ೧೩೧೩೧ ಕ್ವಿಂಟಾಲ್ ಭತ್ತ, ಹಾಗೂ ೨ ರೈತರು ಅಂದಾಜು ೩೮ ಕ್ವಿಂಟಾಲ್‌ರಾಗಿ ಖರೀದಿ ಮಾಡಲು ನೋಂದಣಿ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ೨೦೪೦ ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಾಲ್‌ಗೆ ೩೫೭೮ ರೂ. ನಿಗದಿಪಡಿಸಲಾಗಿದೆ.

ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ ಆಗುವಂತೆ ಮಡಿಕೇರಿ ಎಪಿಎಂಸಿ ಆವರಣ, ಕುಶಾಲನಗರ ಎಪಿಎಂಸಿ ಆವರಣ, ಗೋಣಿಕೊಪ್ಪ ಎಪಿಎಂಸಿ ಆವರಣ ಹಾಗೂ ಸೋಮವಾರಪೇಟೆ ಎಪಿಎಂಸಿ ಮಾರ್ಕೆಟ್ ಆವರಣದಲ್ಲಿ ಖರೀದಿ ಮಾಡಲಾಗುತ್ತಿದೆ. ರೈತರು ಸಂಬAಧಪಟ್ಟ ನೋಂದಣಿ ಕೇಂದ್ರಗಳಲ್ಲಿಯೇ ತಮ್ಮ ಭತ್ತವನ್ನು ನೀಡಲು ಸೂಚಿಸಿದರು. ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಪ್ರದೇಶದಲ್ಲಿ ರೈತರು ನೋಂದಣಿ ಕೇಂದ್ರ ತೆರೆಯಲು ಬೇಡಿಕೆಯನ್ನು ಸಲ್ಲಿಸಿದ್ದು, ಅದೇ ರೀತಿ ಕೊಡ್ಲಿಪೇಟೆ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ನೋಂದಣಿ ಕೇಂದ್ರ ತೆರೆಯಲು ಅಗತ್ಯ ಕ್ರಮವಹಿಸಲು ಖರೀದಿ ಏಜೆನ್ಸಿಯವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸೂಕ್ತ ದಾಸ್ತಾನಿಗಾಗಿ ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‌ಗಳನ್ನು ಈಗಾಗಲೇ ನಿಯೋಜಿಸಲಾಗಿದೆ. ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾAಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಪ್ರೂಟ್ಸ್ ತಂತ್ರಾAಶದಲ್ಲಿ ನೋಂದಣಿ ಮಾಡಿಕೊಂಡು ತಾವು ಬೆಳೆದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ ಎಂದರು. ರೈತರ ನೋಂದಣಿಗೆ ತಾಂತ್ರಿಕ ತೊಂದರೆಗಳು ಕಂಡುಬAದಲ್ಲಿ ಕೂಡಲೇ ಸರಿಪಡಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಪ್ರೂಟ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಎನ್‌ಪಿಸಿಐ ಬ್ಯಾಂಕ್ ಖಾತೆಯ ವಿವರ ನೀಡಬೇಕಿದೆ ಎಂದು ಅವರು ತಿಳಿಸಿದರು.

ಭತ್ತದ ಖರೀದಿ ನೋಂದಣಿ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಮುಖಂಡರಿಗೆ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡುವಂತೆ ಹಾಗೂ ರೈತರ ನೋಂದಣಿ ಕೇಂದ್ರಗಳು ಹಾಗೂ ಭತ್ತ ಖರೀದಿ ಕೇಂದ್ರಗಳ ಕುರಿತು ವಿವರಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಅವರು ಖರೀದಿ ಏಜೆನ್ಸಿ ಅವರಿಗೆ ತಿಳಿಸಿದರು.

ಸರಕಾರವು ಪೌಷ್ಟಿಕಾಂಶತೆಯಿAದ ಕೂಡಿದ ಸಾರವರ್ದಿತ ಅಕ್ಕಿಯನ್ನು ಫಲಾನುಭವಿಗಳಿಗೆ ನೀಡಲು ಉದ್ದೇಶಿಸಿದ್ದು, ಈ ಸಂಬAಧ ಅಕ್ಕಿಗಿರಣಿಗಳಲ್ಲಿ ಹಲ್ಲಿಂಗ್ ಮಾಡುವಾಗ ಸಾರವರ್ದಿತ ಅಕ್ಕಿಯನ್ನು ತಯಾರು ಮಾಡಲು ಕಡ್ಡಾಯವಾಗಿ ಅಕ್ಕಿ ಗಿರಣಿ ಮಾಲೀಕರುಗಳು ಬ್ಲೆಂಡಿAಗ್ ಮಿಷನ್‌ನ್ನು ಅಳವಡಿಸಲು ಹಾಗೂ ಅಳವಡಿಸದ ಅಕ್ಕಿಗಿರಣಿಗಳಿಗೆ ಸರಕಾರದ ಆದೇಶದಂತೆ ಹಲ್ಲಿಂಗ್‌ಗೆ ಭತ್ತವನ್ನು ನೀಡಲು ಸಾಧ್ಯವಿರುವುದಿಲ್ಲ ಎಂದು ಸಭೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್, ಕೃಷಿ ಇಲಾಖೆಯ ಅಧಿಕಾರಿಗಳು, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಅಧಿಕಾರಿಗಳು ಹಾಗೂ ಜಿಲ್ಲೆಯ ಅಕ್ಕಿ ಗಿರಣಿ ಮಾಲೀಕರುಗಳು ಸೇರಿದಂತೆ ಇತರರು ಹಾಜರಿದ್ದರು.