*ಶನಿವಾರಸಂತೆ, ಜ. ೧೦: ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶನಿವಾರಸಂತೆ ಪಟ್ಟಣಕ್ಕೆ ಈವರೆಗೆ ಸುಸಜ್ಜಿತ ಬಸ್ ನಿಲ್ದಾಣ ಇಲ್ಲದಿರುವ ಬಗ್ಗೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ, ಜಿಲ್ಲಾಧಿಕಾರಿಗಳ ಗಮನ ಸೆಳೆದು ಮನವಿ ಮಾಡಿಕೊಂಡಿದ್ದ ಹಿನ್ನೆಲೆ, ಜಿಲ್ಲಾಧಿಕಾರಿ ಬಿ.ಸಿ. ಸತೀಶ ಸ್ಥಳ ಪರಿಶೀಲನೆ ನಡೆಸಿದರು.

ಶನಿವಾರಸಂತೆಯಲ್ಲಿ ಆಯೋಜನೆಗೊಂಡಿದ್ದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿಗಳು, ನಂತರ ಗ್ರಾಮ ಪಂಚಾಯಿತಿಯ ಮನವಿಯ ಮೇರೆ ಗ್ರಾ.ಪಂ. ಕಚೇರಿಗೆ ಆಗಮಿಸಿದರು. ಈ ಸಂದರ್ಭ ಸರಕಾರ ಮತ್ತು ಕೆಎಸ್‌ಆರ್‌ಟಿಸಿ ಸಂಸ್ಥೆ ಬಸ್ ನಿಲ್ದಾಣಕ್ಕೆ ಅನುದಾನ ನೀಡಲು ಸಿದ್ಧವಾಗಿದ್ದರೂ ಲೋಕೋಪಯೋಗಿ ಇಲಾಖೆ ಜಾಗ ನೀಡುವ ಬಗ್ಗೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸದಸ್ಯರು ದೂರಿದರು.

ಶನಿವಾರಸಂತೆಯಲ್ಲಿ ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿ ೭೫ ಸೆಂಟ್ ಜಾಗವಿದ್ದು, ಇಲ್ಲಿ ಸರ್ಕಾರಿ ಬಸ್ ನಿಲ್ದಾಣ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಗ್ರಾಮ ಪಂಚಾಯಿತಿ ವತಿಯಿಂದ ಈ ಹಿಂದೆಯೇ ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಮಾಡಲಾಗಿತ್ತು.

ಶನಿವಾರಸಂತೆ ಪಟ್ಟಣ ದಿನೇ ದಿನೇ ಬೆಳೆಯುತ್ತಿದ್ದು, ಜನ ಸಂಖ್ಯೆಯೂ ಹೆಚ್ಚುತ್ತಿದೆ. ನೆರೆಯ ಹಾಸನ, ಮಂಗಳೂರು, ಸುಬ್ರಹ್ಮಣ್ಯ, ಅರಕಲಗೂಡು, ಬೆಂಗಳೂರಿಗೆ ದಿನಂಪ್ರತಿ ನೂರಾರು ಮಂದಿ ಪ್ರಯಾಣಿಕರು ತೆರಳುತ್ತಿದ್ದಾರೆ.

ಇದರೊಂದಿಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರ ಓಡಾಟವೂ ಅಧಿಕವಿದೆ. ಖಾಸಗಿ ಹಾಗೂ ಸರ್ಕಾರಿ ಬಸ್ ನಿಲ್ದಾಣವಿಲ್ಲದೇ ಇರುವುದರಿಂದ ಪಟ್ಟಣದ ಕೆ.ಆರ್.ಸಿ. ಸರ್ಕಲ್‌ನಲ್ಲೇ ಬಸ್‌ಗಳು ನಿಲುಗಡೆಯಾಗುತ್ತಿವೆ. ಇದರಿಂದಾಗಿ ಇತರ ವಾಹನಗಳಿಗೆ ಸಮಸ್ಯೆಯಾಗುತ್ತಿದೆ ಎಂದು ಬಸ್ ನಿಲ್ದಾಣದ ಅಗತ್ಯತೆಯ ಬಗ್ಗೆ ಗ್ರಾಮ ಪಂಚಾಯಿತಿ ಪ್ರಮುಖರು, ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಲೋಕೋಪಯೋಗಿ ಇಲಾಖೆಗೆ ಸೇರಿದ ೭೫ ಸೆಂಟ್ ಜಾಗದಲ್ಲಿ ಬಸ್ ನಿಲ್ದಾಣ ನಿರ್ಮಿಸಲು ಕ್ರಮಕೈಗೊಳ್ಳ ಬೇಕೆಂದು ಮನವಿ ಮಾಡಿದ ಹಿನ್ನೆಲೆ, ಈ ಬಗ್ಗೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಡಾ. ಬಿ.ಸಿ. ಸತೀಶ ಭರವಸೆ ನೀಡಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫರ್ಜಾನಾ ಶಾಹಿದ್, ಉಪಾಧ್ಯಕ್ಷ ಮಧು, ಸದಸ್ಯರುಗಳಾದ ಸರ್ದಾರ್, ಎಸ್.ಎನ್. ರಘು, ಸರೋಜ, ಶರತ್‌ಶೇಖರ್, ಆದಿತ್ಯ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮೇದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.