ಸೋಮವಾರಪೇಟೆ, ಜ. ೧೭ : ಪಟ್ಟಣದ ಸಹಕಾರ ಯೂನಿಯನ್ ಕಟ್ಟಡ ಸಮೀಪ ನೂತನವಾಗಿ ತೆರೆಯಲಾಗಿರುವ ಜಾತ್ಯಾತೀತ ಜನತಾದಳದ ಕ್ಷೇತ್ರ ಸಮಿತಿ ಕಚೇರಿಯನ್ನು ಜೆಡಿಎಸ್ ಕ್ಷೇತ್ರ ಸಮಿತಿ ಅಧ್ಯಕ್ಷ ಹೆಚ್.ಆರ್. ಸುರೇಶ್ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದು, ಜೆಡಿಎಸ್ ಪಕ್ಷ ಸಂಘಟನೆಗೆ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಚೇರಿಯನ್ನು ಆರಂಭಿಸಲಾಗಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಪಕ್ಷವು ಉತ್ತಮ ಸಾಧನೆ ಮಾಡಿದ್ದು, ಈ ಬಾರಿ ಗೆಲ್ಲುವ ನಿರೀಕ್ಷೆಯಿದೆ. ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕೆಂದರು.

ಜೆಡಿಎಸ್ ಮುಖಂಡ ನಾಪಂಡ ಮುತ್ತಪ್ಪ ಮಾತನಾಡಿ, ಈ ಬಾರಿ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿ ದ್ದಾರೆ. ಈ ಹಿನ್ನೆಲೆ ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸ ಬೇಕಾದರೆ ಈಗಿನಿಂದಲೇ ಕಾರ್ಯಕರ್ತರು ಮನೆ ಮನೆ ಸಂಪರ್ಕ ಮಾಡಿ ಜೆಡಿಎಸ್ ಪರ ಪ್ರಚಾರ ಮಾಡಬೇಕು ಎಂದರು.

ಈ ಹಿಂದಿನ ಸಾಲಿನಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ನಾಡಿನ ರೈತರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವರ್ಗದ ಮಂದಿಗೆ ನೀಡಿದ ಜನಪರ ಯೋಜನೆಗಳ ಬಗ್ಗೆ ಕಾರ್ಯಕರ್ತರು ಮಾಹಿತಿ ಒದಗಿಸಬೇಕು ಎಂದರು. ಈ ಸಂದರ್ಭ ಜೆಡಿಎಸ್ ಮುಖಂಡರುಗಳಾದ ಪ್ರವೀಣ್, ಸ್ವಾಗತ್ ಗೌಡ, ವಿಜೇಶ್, ಹೂವಯ್ಯ, ಆದರ್ಶ್ ತಮ್ಮಯ್ಯ, ಮಹಿಳಾ ಘಟಕದ ಅಧ್ಯಕ್ಷೆ ಎಂ.ಎ. ರುಬೀನಾ ಸೇರಿದಂತೆ ಇತರರು ಉಪಸ್ಥಿತರಿದ್ದರು.