ಗೋಣಿಕೊಪ್ಪಲು, ಜ. ೧೯ : ಇತ್ತೀಚಿನ ದಿನದಲ್ಲಿ ಕಾಂಗ್ರೆಸ್ ಪಕ್ಷದತ್ತ ಯುವ ಪಡೆ ಆಗಮಿಸುತ್ತಿದ್ದು ಪಕ್ಷಕ್ಕೆ ಹೊಸ ಚೈತನ್ಯ ಮೂಡುತ್ತಿದೆ. ಯುವಕರು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆ ಗೊಳ್ಳುತ್ತಿದ್ದಾರೆ. ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಸೇರ್ಪಡೆಯಾಗು ತ್ತಿರುವುದು ಆಶಾದಾಯಕ ಬೆಳವಣಿಗೆ ಯಾಗಲಿದೆ ಎಂದು ಕೆಪಿಸಿಸಿ ವಕ್ತಾರ, ಹೈಕೋರ್ಟ್ ಹಿರಿಯ ವಕೀಲ ಅಜ್ಜಿಕುಟ್ಟಿರ ಪೊನ್ನಣ್ಣ ಹೇಳಿದರು. ಪೊನ್ನಂಪೇಟೆ ತಾಲೂಕು ಬಿರುನಾಣಿ ವಲಯ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪಕ್ಷಕ್ಕೆ ಹಲವು ಮುಖಂಡರ ಸೇರ್ಪಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪೊನ್ನಣ್ಣ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಎಲ್ಲಾ ವಿಶ್ವಾಸಗಳಿವೆ. ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿರುವ ಯುವ ಸಮೂಹಕ್ಕೆ ಉತ್ತಮ ಭವಿಷ್ಯವಿದೆ. ಆ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ನಿರ್ವಹಿಸಿ ಪಕ್ಷವನ್ನು ಗಟ್ಟಿಗೊಳಿಸಬೇಕು. ಪಕ್ಷ ನೀಡುವ ಜವಾಬ್ದಾರಿಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಬೇರೆ ಪಕ್ಷದಿಂದ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಮರಳುತ್ತಿದ್ದಾರೆ. ಜಿಲ್ಲೆಯ ಉದ್ದಗಲಕ್ಕೂ ಬದಲಾವಣೆಯ ಗಾಳಿ ಬೀಸುತ್ತಿದ್ದು ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣ ನಿರ್ಮಾಣವಾಗುತ್ತಿದೆ ಎಂದರು.
ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಕೊಡಗಿನಲ್ಲಿ ಹಲವು ಸಮಯದಿಂದ ಯಾವುದೇ ಅಧಿಕಾರವಿಲ್ಲದೆ ಕಾರ್ಯಕರ್ತರು ನೋವನ್ನು ಅನುಭವಿಸಿದ್ದರು. ಮುಂದಿನ ದಿನದಲ್ಲಿ ಉತ್ತಮ ಅವಕಾಶ ಇರುವುದರಿಂದ ಯಾರು ಕೂಡ ದೃತಿ ಗೆಡುವ ಅವಶ್ಯಕತೆಯಿಲ್ಲ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಕಾರ್ಯಕರ್ತರಿಗೆ ತಿಳಿ ಹೇಳಿದರು. ಇತ್ತೀಚಿನ ದಿನದಲ್ಲಿ ಹಲವು ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಪಕ್ಷದಲ್ಲಿ ಸಕ್ರಿಯಗೊಂಡವರನ್ನು ಗುರುತಿಸಿ ಮುಂದೆ ಗೌರವ ನೀಡಲಿದೆ; ಈ ನಿಟ್ಟಿನಲ್ಲಿ ಮುಂದಿನ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಕಾರ್ಯಕರ್ತರು ಕೆಲಸ ಮಾಡುವಂತೆ ಕರೆ ನೀಡಿದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಮಾತನಾಡಿ ಕಾಂಗ್ರೆಸ್ ಪಕ್ಷಕ್ಕೆ ಗ್ರಾಮಮಟ್ಟದಲ್ಲಿ ಹೆಚ್ಚಿನ ಒಲವು ಕಂಡು ಬರುತ್ತಿದೆ. ಹೀಗಾಗಿ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಗೊಳ್ಳುತ್ತಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಿಷ್ಠಗೊಳ್ಳುತ್ತಿದೆ ಎಂದರು. ಬಿರುನಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಕುಪ್ಪಣಮಾಡ ಪ್ರೀತಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಡಿಸಿಸಿ ಸದಸ್ಯ ಮುಕ್ಕಾಟಿರ ಸಂದೀಪ್, ಹಿರಿಯ ಪದಾಧಿಕಾರಿಗಳಾದ ಲಾಲಾ ಅಪ್ಪಣ್ಣ, ಕಾಳಿಮಾಡ ಮುತ್ತಣ್ಣ, ಗುಡ್ಡಮಾಡ ಚಂಗಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಅಮನ್ ತಮ್ಮಯ್ಯ, ಕಾರ್ಯದರ್ಶಿ ಕಳಕಂಡ ಮದನ್, ಜೀತು ಕುಶಾಲಪ್ಪ ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.