ಕೂಡಿಗೆ, ಜ. ೨೦: ಗ್ರಾಮಾಂತರ ಪ್ರದೇಶಗಳಲ್ಲಿ ಈಗಾಗಲೇ ವಿವಿಧ ಅನುದಾನವನ್ನು ಬಳಕೆ ಮಾಡಿ ಕೊಂಡು ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿ ಪಡಿಸಲಾಗುತ್ತಿದೆ, ಮುಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಉಪ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಅನುದಾನವನ್ನು ನೀಡಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭರವಸೆ ನೀಡಿದ್ದಾರೆ.

ಕೂಡಿಗೆಯಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮಡಿಕೇರಿ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರದ ವಿವಿಧ ಇಲಾಖೆಯ ಮುಖೇನ ಜಿಲ್ಲೆಯ ಅಭಿವೃದ್ಧಿಗೆ ಬೇಕಾಗುವ ಎಲ್ಲಾ ಯೋಜನೆಗಳನ್ನು ಕೈಗೊಳ್ಳಲಾಗಿದೆ, ಅದರ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತಿದೆ.

ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ರಹಿತರಿಗೆ ವಸತಿ ನೀಡುವ ಉದ್ದೇಶದಿಂದ ಪೈಸಾರಿ ಜಾಗವನ್ನು ಗುರುತಿಸಿ ವಸತಿ ಯೋಜನೆ ಹೆಚ್ಚು ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಕೂಡಿಗೆ ಶಕ್ತಿ ಕೇಂದ್ರದ ಅಧ್ಯಕ್ಷ ಕೆ.ಟಿ. ಗಿರೀಶ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಬಿನ್ ದೇವಯ್ಯ, ತಾಲೂಕು ಮಂಡಲ ಅಧ್ಯಕ್ಷ ಮನು ಕುಮಾರ್ ರೈ, ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲೆಯ ಪ್ರಬಾರಿ ಬಿ.ಬಿ. ಭಾರತೀಶ್, ಸಂಚಾಲಕ ಮಹೇಶ್ ತಿಮ್ಮಯ್ಯ, ವಿಸ್ತಾರಕ ವಿಕ್ರಮ್, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮಂಜುಳ ಕುಶಾಲನಗರ ನಗರ ಬಿಜೆಪಿ ಅಧ್ಯಕ್ಷ ಉಮಾಶಂಕರ್, ಪಟ್ಟಣ ಪಂಚಾಯಿತಿ ಸದಸ್ಯ ಮನು, ತಾಲೂಕು ಮಂಡಲ ಕಾರ್ಯದರ್ಶಿ ಕಿಟ್ಟಿ ಸೇರಿದಂತೆ ಮಂಡಲ ಪ್ರಮುಖ್ ರವಿ, ಕೂಡಿಗೆ ಗ್ರಾಮ ಪಂಚಾಯಿತಿ ಬಿಜೆಪಿ ಬೆಂಬಲಿತ ಸದಸ್ಯರು, ಕೂಡಿಗೆ, ಹುದುಗೂರು, ಸೀಗೆಹೊಸೂರು, ಮದಲಾಪುರ ಗ್ರಾಮಗಳ ಬಿಜೆಪಿ ಕಾರ್ಯಕರ್ತರು, ವಿವಿಧ ಘಟಕದ ಬೂತ್ ಅಧ್ಯಕ್ಷರುಗಳು, ವಿವಿಧ ಸಮಿತಿಯ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು.