೧೫ ಸಾವಿರ ಶಿಕ್ಷಕರ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು, ಜ. ೩೦: ೧೫ ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬAಧಿಸಿದAತೆ ೧:೧ ಅನುಪಾತದಲ್ಲಿ ರಾಜ್ಯ ಸರ್ಕಾರ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಈ ಮಹತ್ವದ ಆದೇಶ ಹೊರಡಿಸಿದ್ದು, ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿ ಶಿಕ್ಷಕರಾಗುವ ಕನಸು ಕಾಣುತ್ತಿದ್ದವರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ.ಅಭ್ಯರ್ಥಿಗಳ ಆಯ್ಕೆ ವೇಳೆ ಶಿಕ್ಷಣ ಇಲಾಖೆ, ಮಹಿಳಾ ಅಭ್ಯರ್ಥಿಗಳ ಪತಿಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣಿಸಿದ್ದು, ಇದರಿಂದ ಹಲವು ಅಭ್ಯರ್ಥಿಗಳು ರಿಜೆಕ್ಟ್ ಆಗಿದ್ದರು. ಇದನ್ನು ಪ್ರಶ್ನಿಸಿ ನೂರಾರು ಅಭ್ಯರ್ಥಿಗಳು ರಿಟ್ ಅರ್ಜಿ ಸಲ್ಲಿಸಿದ್ದರು ಮತ್ತು ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣಿಸಬೇಕು ಎಂದು ಮನವಿ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಈಗ ಪ್ರಕಟಿಸಲಾಗಿರುವ ಆಯ್ಕೆ ಪಟ್ಟಿಯನ್ನು ರದ್ದುಪಡಿಸಿದ್ದು, ಅಭ್ಯರ್ಥಿ ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಆಧರಿಸಿ ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸುವಂತೆ ಶಿಕ್ಷಣ ಇಲಾಖೆಗೆ ಆದೇಶಿಸಿದೆ.

ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ೩೨ ಮಂದಿ ಸಾವು

ಪೇಶಾವರ, ಜ. ೩೦: ಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಮಸೀದಿಯೊಂದರಲ್ಲಿ ಇಂದು ನಡೆದ ಪ್ರಬಲ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ೩೨ ಮಂದಿ ಮೃತಪಟ್ಟಿದ್ದು, ೧೫೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಭದ್ರತಾ ಮತ್ತು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಅಧಿಕಾರಿಗಳ ಪ್ರಕಾರ, ಆತ್ಮಹತ್ಯಾ ದಾಳಿಕೋರನು ಪ್ರಾರ್ಥನೆಯ ಸಮಯದಲ್ಲಿ ಮುಂದಿನ ಸಾಲಿನಲ್ಲಿದ್ದು ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಪರಿಣಾಮ ಜೊಹ್ರ್ ಪ್ರಾರ್ಥನೆ ಸಲ್ಲಿಸುತ್ತಿದ್ದ ೧೫೦ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆೆ. ಗಾಯಾಳುಗಳನ್ನು ಪೇಶಾವರ ಲೇಡಿ ರೀಡಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಫೋಟದಲ್ಲಿ ೩೨ ಮಂದಿ ಮೃತಪಟ್ಟಿದ್ದಾರೆ. ಇನ್ನು ೧೫೦ ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆತರಲಾಗಿದೆ ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. ಇದರಲ್ಲಿ ೧೦ಕ್ಕೂ ಹೆಚ್ಚು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆತ್ಮಾಹುತಿ ಬಾಂಬ್ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಪ್ರಧಾನಿ ಶಹಬಾಜ್ ಷರೀಫ್ ಅವರು, ಸಂತ್ರಸ್ತರಿಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಚಿಕಿತ್ಸೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಅಲ್ಲದೆ ದಾಳಿಯ ಹಿಂದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಭರವಸೆ ನೀಡಿದ್ದಾರೆ.

ವಯನಾಡ್ ಬೋರ್ಡಿಂಗ್ ಶಾಲೆಯಲ್ಲಿ ಹಲವಾರು ವಿದ್ಯಾರ್ಥಿಗಳು ಅಸ್ವಸ್ಥ

ವಯನಾಡ್, ಜ. ೩೦: ಕೇರಳದ ವಯನಾಡ್ ಜಿಲ್ಲೆಯ ಲಕ್ಕಿಡಿ ಪ್ರದೇಶದ ಜವಾಹರ್ ನವೋದಯ ವಿದ್ಯಾಲಯದ ಹಲವಾರು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಂಕಿತ ವಿಷಾಹಾರ ಸೇವನೆಯಿಂದ ವಾಂತಿ ಭೇದಿಯಿಂದ ೬೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅವರೆಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈತಿರಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ಗುರುವಾರದಿಂದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಭಾನುವಾರ ರಾತ್ರಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಹೊಟ್ಟೆಯ ಸಮಸ್ಯೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅಸ್ವಸ್ಥರಾದ ವಿದ್ಯಾರ್ಥಿಗಳ ನಿಖರ ಸಂಖ್ಯೆ ಮತ್ತು ಅದಕ್ಕೆ ಕಾರಣಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದು ಪ್ರದೇಶದ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಸರ್ಕಾರಿ ವಸತಿ ಶಾಲೆಯಾಗಿರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ ೪೮೬ ವಿದ್ಯಾರ್ಥಿಗಳು ಓದುತ್ತಿದ್ದಾರೆ.

ಭಾರತ್ ಜೋಡೋ ಯಾತ್ರೆ ಚುನಾವಣೆ ಗೆಲ್ಲುವುದಕ್ಕಲ್ಲ; ಭಾರತವನ್ನು ಒಗ್ಗೂಡಿಸಲು: ಮಲ್ಲಿಕಾರ್ಜುನ್ ಖರ್ಗೆ

ಶ್ರೀನಗರ, ಜ. ೩೦: ಭಾರತ್ ಜೋಡೋ ಯಾತ್ರೆ ಚುನಾವಣೆ ಗೆಲ್ಲಲು ಅಥವಾ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ಕೈಗೊಂಡಿಲ್ಲ, ದ್ವೇಷದ ವಿರುದ್ಧ ಧ್ವನಿ ಎತ್ತಲು. ದೇಶವನ್ನು ಒಗ್ಗೂಡಿಸಲು ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆ ಸಮಾರೋಪ ಸಮಾರಂಭ ಕಾರ್ಯಕ್ರಮ ಭಾರೀ ಹಿಮಪಾತದ ನಡುವೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಮಲ್ಲಿಕಾರ್ಜುನ್ ಖರ್ಗೆ ಅವರು, ಬಿಜೆಪಿಯವರು ದೇಶದಲ್ಲಿ ದ್ವೇಷವನ್ನು ಹರಡುತ್ತಿದ್ದಾರೆ. ನಿರುದ್ಯೋಗ ಮತ್ತು ಹಣದುಬ್ಬರದಂತಹ ವಿಷಯಗಳಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ದೇಶವನ್ನು ಒಗ್ಗೂಡಿಸಬಹುದು ಎಂದು ರಾಹುಲ್ ಗಾಂಧಿ ಈ ಯಾತ್ರೆ ಮೂಲಕ ಸಾಬೀತುಪಡಿಸಿದ್ದಾರೆ ಎಂದು ಖರ್ಗೆ ಹೇಳಿದರು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ, ಆರೆಸ್ಸೆಸ್ ಮತ್ತು ಬಿಜೆಪಿ ದೇಶದಲ್ಲಿ ಬಡವರು-ಶ್ರೀಮಂತರ ವಿಭಜನೆಯನ್ನು ವಿಸ್ತರಿಸುವ ನೀತಿಯನ್ನು ಅನುಸರಿಸುತ್ತಿವೆ ಎಂದು ಖರ್ಗೆ ಆರೋಪಿಸಿದರು. ಶೇಕಡಾ ೭೨ ರಷ್ಟು ಸಂಪತ್ತನ್ನು ಲೂಟಿ ಮಾಡುತ್ತಿದ್ದರೆ ಶೇಕಡಾ ೫೦ ರಷ್ಟು ಜನರು ಕೇವಲ ಶೇಕಡಾ ಮೂರರಷ್ಟು ಹೊಂದಿದ್ದಾರೆ ಎಂದು ಅವರು ಹೇಳಿದರು. ಇದಕ್ಕೂ ಮುನ್ನ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, 'ದೇಶದಲ್ಲಿ ನಡೆಯುತ್ತಿರುವ ರಾಜಕೀಯದಿಂದ ದೇಶಕ್ಕೆ ಒಳ್ಳೆಯದಾಗಲು ಸಾಧ್ಯವಿಲ್ಲ ಎಂದು ನಾನು ಇಲ್ಲಿ ನಿಂತು ಹೇಳಬಲ್ಲೆ. ಒಡೆದು ಆಳುವ ರಾಜಕಾರಣ ದೇಶದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ಒಂದು ರೀತಿಯಲ್ಲಿ, ಇದು ಅಧ್ಯಾತ್ಮಿಕ ಪ್ರಯಾಣವಾಗಿತ್ತು ಎಂದರು. ಈ ಸಂದರ್ಭದಲ್ಲಿ ಶ್ರೀನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ರಾಷ್ಟçಧ್ವಜಾರೋಹಣ ಮಾಡಲಾಯಿತು. ಭಾರತ ಜೋಡೋ ಯಾತ್ರಾ ಸ್ಮಾರಕವನ್ನು ಅನಾವರಣಗೊಳಿಸಲಾಗಿದೆ.