ಸೋಮವಾರಪೇಟೆ, ಜ. ೩೦: ಜಿಲ್ಲೆಯ ಮಟ್ಟಿಗೆ ಪ್ರಥಮ ಎಂಬ ಹೆಗ್ಗಳಿಕೆ ಹೊಂದಿರುವ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಆಸ್ಪತ್ರೆಯು ಸೋಮವಾರಪೇಟೆಯಲ್ಲಿ ನಿರ್ಮಾಣಗೊಂಡಿದ್ದು, ೬೦ ಲಕ್ಷ ವೆಚ್ಚದ ನೂತನ ಆಸ್ಪತ್ರೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಲೋಕಾರ್ಪಣೆಗೊಳಿಸಿದರು.

ಇಲ್ಲಿನ ಹೋಮಿಯೋಪತಿ ಆಸ್ಪತ್ರೆ ಆವರಣದಲ್ಲಿ ನಿರ್ಮಾಣಗೊಂಡಿರುವ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ರಂಜನ್, ನೈಸರ್ಗಿಕ ಚಿಕಿತ್ಸಾ ಪದ್ಧತಿಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಇಲ್ಲಿನ ಆಸ್ಪತ್ರೆಯನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದ್ದು, ಈಗಾಗಲೇ ‘ಮಸಾಜ್ ಕಾಟ್’-‘ಸ್ಟೀಂ’ ವ್ಯವಸ್ಥೆ ಅಳವಡಿಸಲಾಗಿದೆ. ‘ಮಡ್ ಬಾತ್’ ಸಹ ಇದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್, ಆಯುಷ್ ಅಧಿಕಾರಿ ಡಾ. ರೇಣುಕಾ ದೇವಿ, ತಾಲೂಕು ತಹಶಿಲ್ದಾರ್ ಎಸ್.ಎನ್. ನರಗುಂದ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಮುಖ್ಯಾಧಿಕಾರಿ ನಾಚಪ್ಪ, ಚೌಡ್ಲು ಗ್ರಾ.ಪಂ. ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಜಿ.ಪಂ. ಸಹಾಯಕ ಕಾರ್ಯಪಾಲಕ ಅಭಿಯಂತರ ಟಿ.ಪಿ. ವೀರೇಂದ್ರ, ತಾ.ಪಂ. ಮಾಜೀ ಉಪಾಧ್ಯಕ್ಷ ಅಭಿಮನ್ಯುಕುಮಾರ್, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸ್ಮಿತಾ ಸೇರಿದಂತೆ ಇತರರು ಉಪಸ್ಥಿತರಿದ್ದರು.