ಪೊನ್ನಂಪೇಟೆ. ಫೆ, ೭ : ಕೊಡವ ದೀನ ಬಂಧು ಚಾರಿಟೇಬಲ್ ಟ್ರಸ್ಟ್ ಮೈಸೂರು ಇವರ ವತಿಯಿಂದ ಗೋಣಿಕೊಪ್ಪಲು ಕಾವೇರಿ ಪದವಿ ಕಾಲೇಜು, ಕಾವೇರಿ ಪದವಿ ಪೂರ್ವ ಕಾಲೇಜು ಹಾಗೂ ಕಾವೇರಿ ಪಾಲಿಟೆಕ್ನಿಕ್ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ಕೊಡವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಪದವಿ ವಿದ್ಯಾರ್ಥಿಗಳಿಗೆ ತಲಾ ರೂ.೭೦೦೦, ಪದವಿ ಪೂರ್ವ ವಿದ್ಯಾರ್ಥಿಗಳಿಗೆ ತಲಾ ರೂ.೪೦೦೦, ಡಿಪ್ಲೊಮೋ ವಿದ್ಯಾರ್ಥಿಗಳಿಗೆ ತಲಾ ರೂ. ೫೦೦೦ ದಂತೆ ಒಟ್ಟು ೧೦೧ ವಿದ್ಯಾರ್ಥಿಗಳಿಗೆ ರೂ.೬,೨೧,೦೦೦ ರೂಪಾಯಿ ಮೊತ್ತವನ್ನು ವಿತರಿಸಲಾಯಿತು.
ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ ಕೊಡವ ದೀನ ಬಂಧು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಮತ್ತು ಟ್ರಸ್ಟಿ ಆಗಿರುವ ಕಟ್ಟೇರ ಎ.ಕಾರ್ಯಪ್ಪ ಮಾತನಾಡಿ ಆರ್ಥಿಕವಾಗಿ ಹಿಂದುಳಿದ ಕೊಡವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಟ್ರಸ್ಟ್ನ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಧನ ಸಹಾಯ ಮಾಡಲಾಗುತ್ತಿದೆ. ಈ ಹಣವನ್ನು ತಮ್ಮ ಓದಿಗೆ ಪೂರಕವಾಗಿ ಉಪಯೋಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ವಿದ್ಯಾರ್ಜನೆಯಲ್ಲಿ ತೊಡಗಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ಹೆಸರು ಸಂಪಾದಿಸಿಕೊಳ್ಳಬೇಕು. ತಂದೆ ತಾಯಿ, ಗುರು ಹಿರಿಯರನ್ನು ಗೌರವಿಸುವ ಸಂಪ್ರದಾಯವನ್ನು ರೂಢಿಸಿಕೊಳ್ಳಬೇಕು ಎಂದರು.
ಟ್ರಸ್ಟ್ ನ ಗೌರವ ಕಾರ್ಯದರ್ಶಿ ಪಟ್ಟಡ.ಎ.ಜಯಕುಮಾರ್ ಮಾತನಾಡಿ ಟ್ರಸ್ಟ್ನಿಂದ ಸಹಾಯ ಪಡೆದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಗಿಸಿ ತಾವು ಉದ್ಯೋಗಕ್ಕೆ ಸೇರಿದ ನಂತರ ಟ್ರಸ್ಟ್ ಗೆ ಧನ ಸಹಾಯ ಮಾಡಿದರೆ, ಮತ್ತಷ್ಟು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಸಾಧ್ಯವಾಗುತ್ತದೆ ಎಂದರು. ಮದುವೆ ಹಾಗೂ ಇನ್ನಿತರ ಸಮಾರಂಭಗಳಲ್ಲಿ ಆಹಾರವನ್ನು ಬೇಕಾಬಿಟ್ಟಿ ಪೋಲು ಮಾಡಲಾಗುತ್ತಿದೆ. ಆಹಾರವನ್ನು ಯಾರು ಪೋಲು ಮಾಡಬಾರದು, ತಮಗೆ ಎಷ್ಟು ಬೇಕೋ ಅಷ್ಟು ಹಾಕಿಸಿಕೊಂಡು ಊಟ ಮಾಡಬೇಕು ಎಂದರು. ನೆರೆದಿದ್ದ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಆಹಾರ ಪೋಲು ಮಾಡುವುದಿಲ್ಲ ಎಂದು ಪ್ರತಿಜ್ಞೆ ಮಾಡಲು ತಿಳಿಸಿ, ಪ್ರತಿಜ್ಞಾವಿಧಿ ಭೋದಿಸಿದರು.
ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೊ.ಇಟ್ಟೀರ.ಕೆ.ಬಿದ್ದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡವ ದೀನ ಬಂಧು ಚಾರಿಟೇಬಲ್ ಟ್ರಸ್ಟ್ ನ ಖಜಾಂಚಿ ಹಾಗೂ ಟ್ರಸ್ಟಿ ಚಂಬಾAಡ ಸೋಮಣ್ಣ, ಟ್ರಸ್ಟಿ ನಿವೃತ್ತ ವಿಂಗ್ ಕಮಾಂಡರ್ ಚೇಂದ್ರಿಮಾಡ ಜಿ.ಮಾದಪ್ಪ, ಕಾವೇರಿ ಪದವಿ ಕಾಲೇಜು ಪ್ರಾಂಶುಪಾಲ ಡಾ.ಮಾಳೇಟಿರ .ಬಿ. ಕಾವೇರಪ್ಪ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಣ್ಣುವಂಡ ಎಸ್.ಮಾದಯ್ಯ, ಉಪನ್ಯಾಸಕರಾದ ಡಾ.ಮುಲ್ಲೇಂಗಡ ರೇವತಿ ಪೂವಯ್ಯ, ಕೊಟ್ಟಂಗಡ ವಿಪ್ರ ನೀಲಮ್ಮ, ಗ್ರಂಥ ಪಾಲಕಿ ಹೆಚ್.ಜಿ.ನಿರ್ಮಲ ಇದ್ದರು.