ಮಡಿಕೇರಿ, ಫೆ. ೮: ತಾ. ೧೧ ರಂದು ಪುತ್ತೂರಿನಲ್ಲಿ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಕಾರ್ಯಕ್ರಮ ಇರುವ ಹಿನ್ನೆಲೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಸಚಿವರುಗಳು ಭಾಗವಹಿಸುವುದರಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ಗಳನ್ನು ನಿಯೋಜನೆ ಮಾಡಲು ಕಾರ್ಯಕ್ರಮದ ಸಂಯೋಜಕರಿAದ ಬೇಡಿಕೆ ಬಂದಿದೆ. ಅದರಂತೆ ಪುತ್ತೂರು ವಿಭಾಗದಿಂದ ಗರಿಷ್ಠ ಸಂಖ್ಯೆಯಲ್ಲಿ ಬಸ್‌ಗಳನ್ನು ನಿಯೋಜನೆ ಮಾಡಲಾಗುತ್ತಿದೆ. ಅಂದು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಕಡಬ ಹಾಗೂ ಮಡಿಕೇರಿ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ನಿಗಮದ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ದಿಸೆಯಲ್ಲಿ ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕ.ರಾ.ರ.ಸಾ. ನಿಗಮದೊಂದಿಗೆ ಸಹಕರಿಸಬೇಕಾಗಿ ವಿಭಾಗೀಯ ನಿಯಂತ್ರಣಾಧಿಕಾರಿ ಕೋರಿದ್ದಾರೆ.