ಚೆಯ್ಯಂಡಾಣೆ, ಫೆ. ೧೫: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ವಿಚಾರದಲ್ಲಿ ಪಕ್ಷದ ಕಾರ್ಯಕರ್ತರಿಗೆ ಗೊಂದಲ ಬೇಡ, ವೀರಾಜಪೇಟೆ ಕ್ಷೇತ್ರಕ್ಕೆ ಪಕ್ಷದಿಂದ ಅಭ್ಯರ್ಥಿ ಖಂಡಿತವಾಗಲೂ ಕಣಕ್ಕಿಳಿಯುತ್ತಾರೆ ಎಂದು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಸಾಕ್ ಖಾನ್ ಹೇಳಿದ್ದಾರೆ.

ಇತ್ತೀಚೆಗೆ ಸಂಕೇತ್ ಪೂವಯ್ಯ ಅವರ ಹೇಳಿಕೆಯಿಂದ ಕಾರ್ಯಕರ್ತರು ನಿರಾಸೆ ಹೊಂದುವುದು ಬೇಡ, ಸಂಕೇತ್ ಅವರು ಅವರ ವೈಯಕ್ತಿಕ ಅಭಿಪ್ರಾಯವನ್ನು ತಿಳಿಸಿದ್ದಾರೆ. ಅದು ಪಕ್ಷದ ತೀರ್ಮಾನ ಅಲ್ಲ ಎಂದಿದ್ದಾರೆ.

ನಾವು ಕೂಡ ವೀರಾಜಪೇಟೆಯಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ಕೊಡಿ ಎಂದು ಬೇಡಿಕೆಯನ್ನು ಇಟ್ಟಿದ್ದು, ಅಲ್ಪಸಂಖ್ಯಾತರಿಗೆ ಅವಕಾಶ ಸಿಗಬಹುದು ಎಂಬ ಭರವಸೆ ಇದೆ. ಆದ್ದರಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಖಚಿತ. ಕಾರ್ಯಕರ್ತರಲ್ಲಿ ಗೊಂದಲ ಬೇಡ ಎಂದು ಅವರು ಹೇಳಿಕೆ ನೀಡಿದ್ದಾರೆ.ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಮುಂದಿನ ವಿಧಾನಸಭಾ ಚನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಯಾವುದೇ ಕಾರಣಕ್ಕೂ ಕಾರ್ಯಕರ್ತರಲ್ಲಿ ಗೊಂದಲ ಬೇಡ ಎಂದು ಜೆ.ಡಿ.ಎಸ್ ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ಕಾಳೇರ ಆಲಿ ಹೇಳಿದ್ದಾರೆ.

ವೀರಾಜಪೇಟೆ ಪ್ರಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಕಾರ್ಯಕರ್ತರಲ್ಲಿ ಯಾವುದೇ ಗೊಂದಲಗಳಿಲ್ಲ; ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೇಟ್ ನೀಡಿದರೆ ಗೆಲುವು ನಿಶ್ಚಿತ; ಈ ವಿಚಾರದ ಬಗ್ಗೆ ಜಿಲ್ಲಾಧ್ಯಕ್ಷರು ಗಮನ ಹರಿಸಬೇಕು ಎಂದು ಹೇಳಿದರು.

ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಜೀದ್ ಚೋಕಂಡಳ್ಳಿ ಮಾತನಾಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಂತ ಸಂದರ್ಭದಲ್ಲಿ ಹಲವಾರು ಉತ್ತಮ ಜನಪರ ಯೋಜನೆಗಳನ್ನು ಜನತೆಗೆ ನೀಡಿರುವುದು ಚುನಾವಣೆ ಎದುರಿಸಲು ನಮಗೆ ಶ್ರೀರಕ್ಷೆಯಾಗಿದೆ ಎಂದರು. ಫೆಬ್ರವರಿ ಕೊನೆಯ ವಾರದಲ್ಲಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಜಿಲ್ಲೆಗೆ ಆಗಮಿಸುತ್ತಿದ್ದು ಬೇರೆ ಪಕ್ಷಗಳಿಂದ ಹಲವಾರು ಕಾರ್ಯಕರ್ತರು ಜೆಡಿಎಸ್ ಸೇರಲಿದ್ದಾರೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಮಡಿಕೇರಿ ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪತಾಯಿ, ವೀರಾಜಪೇಟೆ ಯುವ ಘಟಕ ಅಧ್ಯಕ್ಷ ಸೈಫುದ್ದಿನ್, ಕುಶಾಲನಗರ ಕಾರ್ಯದರ್ಶಿ ಆದಂ ಉಪಸ್ಥಿತರಿದ್ದರು.